ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಲು ನಾನು ಸಿದ್ಧ ಎಂದು ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸಹಕಾರ ಸಚಿವ ಕೆಎನ್ ರಾಜಣ್ಣ ಶುಕ್ರವಾರ ಘೋಷಿಸಿದ್ದಾರೆ. ಸದ್ಯ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಈವರೆಗೆ ಒಗ್ಗಟ್ಟಿನ ಮಂತ್ರವನ್ನು ಜಪಿಸುತ್ತಿದ್ದರೂ, ಕೆಎನ್ ರಾಜಣ್ಣ ಅವರ ಈ ಹೇಳಿಕೆಯು ಈ ಇಬ್ಬರು ಹಿರಿಯ ನಾಯಕರ ನಡುವೆ ಬಹಿರಂಗ ಹೋರಾಟವನ್ನು ಪ್ರಚೋದಿಸುವ ಎಲ್ಲ ಸಾಧ್ಯತೆಗಳನ್ನು ಹೊಂದಿದೆ ಎಂದು ಮೂಲಗಳು ಸೂಚಿಸಿವೆ.
ಮೂರು ದಿನಗಳ ಕಾಲ ದೆಹಲಿಯಲ್ಲಿ ಬೀಡುಬಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಚಿವ ರಾಜಣ್ಣ, ಹೈಕಮಾಂಡ್ ಅವಕಾಶ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ಧ ಎಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ನಾವು ರಾಜ್ಯಾಧ್ಯಕ್ಷರ ಬದಲಾವಣೆಗೆ ಒತ್ತಾಯಿಸುತ್ತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ನಂತರ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆಸಿ ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಅಲಂಕರಿಸುತ್ತಾರೆ ಮತ್ತು ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗುತ್ತಾರೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ’ ಎಂದು ರಾಜಣ್ಣ ಹೇಳಿದರು.
ಡಿಕೆ ಶಿವಕುಮಾರ್ ಅವರು ಲೋಕಸಭೆ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆದರೆ, ಲೋಕಸಭೆ ಚುನಾವಣೆ ಮುಗಿದ ಬಳಿಕವೂ ಈವರೆಗೆ ಕೆಪಿಸಿಸಿ ಅಧ್ಯಕ್ಷರನ್ನು ಏಕೆ ಬದಲಿಸಿಲ್ಲ ಎಂದು ನಾವು ಕೇಳುತ್ತಿದ್ದೇವೆ ಎಂದರು.