ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ: ರೇಣುಕಾಚಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದಶಿ೯, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ರೇಣುಕಾಚಾರ್ಯ , ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ನಮ್ಮ ಸರ್ಕಾರ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ.ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ ಎಂದರು.

ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ಸರಣಿ ಟ್ವೀಟ್ ಮೂಲಕ ರೇಣುಕಾಚಾರ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!