ಅಯೋಧ್ಯಗೆ ನಾನು ಹೋಗುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ,ರಾಯಚೂರು :

ಅಯೋಧ್ಯೆಗೆ ನಾನು ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ನಲ್ಲಿನ ಕಾಗಿನೆಲೆ ಕನಕ ಗುರು ಪೀಠದ ಶಾಖಾ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಹೆಲಿ ಪ್ಯಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ನಿಲುವಿಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಯೋಧ್ಯೆ ಗೆ 22 ರ ನಂತರ ತೆರಳುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಇದೇ ದಿ. 22 ರಂದು ಉದ್ಘಾಟನೆಯಾಗಲಿರುವ ರಾಮ ಮಂದಿರದ ಕಾರ್ಯಕ್ರಮವನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿಯವರಲ್ಲ. ನಾವು ಎಲ್ಲಾ ಧರ್ಮ, ಎಲ್ಲಾ ಜಾತಿಯವರ ಪರವಾಗಿ ಇರುವವರು ಎಂದು ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಮಾಜ ವಿಭಜನಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿಯವರಲ್ಲ. ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದರು.

ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ನಿಮ್ಮ ಪುತ್ರ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಮಾತನಾಡಿ, ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆಯಿಂದಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಸುಮ್ಮನೆ ಊಹಾಪೋಹಗಳು ಅಷ್ಟೇ ಎಂದರು.

ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿನ ಪ್ರತಿ ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿ ಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಎನ್.ಎಸ್.ಬೋಸರಾಜು, ಭೈರತಿ ಸುರೇಶ, ಶಾಸಕ ಬಸನಗೌಡ ದದ್ದಲ್ ಸೇರಿದಂತೆ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!