ಹೊಸ ದಿಗಂತ ವರದಿ, ಚಿತ್ರದುರ್ಗ:
ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆಯಂತೆ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನಾನು ಯಾವುದೇ ಪ್ರಭಾವ ಬೀರಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.
ಸಿರಿಗೆರೆ ತರಳಬಾಳು ಬೃಹನ್ಮಠದ ವತಿಯಿಂದ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಪ್ರತಿ ಬಾರಿ ಚಿತ್ರದುರ್ಗಕ್ಕೆ ಬಂದಾಗಲೂ ಮಠಗಳಿಗೆ ಭೇಟಿ ನೀಡುತ್ತಿದ್ದೇನೆ. ಅದರಂತೆ ಇಂದೂ ಸಹ ಭೇಟಿ ನೀಡಿದ್ದೇನೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದ ಅವರು, ರಾಜ್ಯಾಧ್ಯಕ್ಷನಾಗಿ ಕಳೆದ ಒಂದು ವರ್ಷದಿಂದ ಯಶಸ್ವಿಯಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನೇ ಮುಂದುವರಿಯಬೇಕೆಂಬುದು ಕಾರ್ಯಕರ್ತರ ಆಸೆಯಾಗಿದೆ. ಹಾಗಾಗಿ ನಾನು ಮುಂದುವರಿಯುವ ವಿಶ್ವಾಸವಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಮಾಜಿ ಸಚಿವ ಬಿ.ಶ್ರೀರಾಮುಲು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಪೈಪೋಟಿ ನೀಡುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಶ್ರೀರಾಮುಲು ಅವರು ಹಿರಿಯರಿದ್ದಾರೆ. ಅವರಿಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ. ಎಲ್ಲವನ್ನು ವರಿಷ್ಠರು ಗಮನಿಸುತ್ತಿದ್ದಾರೆ. ಯಾರಿಗೆ ಯಾವ ಸ್ಥಾನ ಕೊಡಬೇಕು ಎಂಬುದನ್ನು ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಗೊವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಸೌಭಾಗ್ಯ ಬಸವರಾಜನ್, ಮುಖಂಡ ಎಸ್.ಲಿಂಗಮೂರ್ತಿ, ಜಿಲ್ಲಾ ಖಜಾಂಚಿ ಮಾಧುರಿ ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಸಿದ್ದಾಪುರ, ರಾಮದಾಸ್, ರೈತ ಮೊರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ ಯಾದವ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಜಯಸಿಂಹ ಖಾಟ್ರೋತ್, ರಾಜಶೇಖರ್, ನಾಗರಾಜ ಬೇಂದ್ರೆ, ದಗ್ಗೆ ಶಿವಪ್ರಕಾಶ್, ಸತ್ಯನಾರಾಯಣ ಮತ್ತಿತರರು ಹಾಜರಿದ್ದರು.