ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನು ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ನಡುವಲ್ಲೇ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಸುತ್ತೇನೆ. ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ವಿಚಾರವನ್ನು ಸಿದ್ದರಾಮಯ್ಯ ಅವರು ಮತ್ತೊಮ್ಮೆ ಪ್ರಸ್ತಾಪಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಅಹಿಂದ ಮತದಾರರನ್ನು ಅದರಲ್ಲೂ ಕುರುಬ ಮತಗಳನ್ನು ಧ್ರುವೀಕರಿಸುವ ಕಾರ್ಯತಂತ್ರದ ಭಾಗವಾಗಿ ಮತ್ತು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ರೀತಿಯ ಹೇಳಿಕೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.