ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗ್ಗೆ ಆಗ್ಗಾಗ್ಗೆ ಚರ್ಚೆಯಾಗುತ್ತಲೇ ಇರುತ್ತದೆ. ಮುಖ್ಯಮಂತ್ರಿ ಹುದ್ದೆ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದು, ಸದ್ಯ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಸಚಿವ ಜಿ ಪರಮೇಶ್ವರ ಅವರು ಸಿದ್ದರಾಮಯ್ಯ ಅವರೇ ದೀರ್ಘಾವಧಿ ಮುಖ್ಯಮಂತ್ರಿ ಆಗಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಶಾಸಕರು ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದರು. ಆಗ ಹೈಕಮಾಂಡ್ ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ ಎಂದೇನು ನಮಗೆ ಹೇಳಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ. ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಹಾರೈಸುತ್ತೇನೆ. ಅವರು ಐದು ವರ್ಷ ಅಧಿಕಾರದಲ್ಲಿದ್ದರೆ ಸಹಜವಾಗಿಯೇ ದಾಖಲೆ ಆಗಲಿದೆ’ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಕೆಲವು ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ. ಹೀಗಾಗಿ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತದೆಯೋ ಗೊತ್ತಿಲ್ಲ ಎಂದು ತಿಳಿಸಿದರು.