ರವೀಂದ್ರನಾಥ ರಾಜೀನಾಮೆ ಅಂಗೀಕಾರ ಬೇಡ: ವಿನೋದಕುಮಾರ ಅಪ್ಪೆ ಮನವಿ

ಹೊಸದಿಗಂತ ವರದಿ ಬೀದರ್:

ಹಿರಿಯ ಐಪಿಎಸ್ ಅಧಿಕಾರಿ ಡಾ. ರವೀಂದ್ರನಾಥ ಅವರ ರಾಜೀನಾಮೆ ಅಂಗೀಕರಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಮನವಿ ಮಾಡಿದ್ದಾರೆ. ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ(ಡಿಸಿಆರ್‌ಇ)ದ ಡಿಜಿಪಿ ಹುದ್ದೆಯಿಂದ ವಿನಾಕಾರಣ ವರ್ಗಾವಣೆ ಮಾಡಿರುವುದಕ್ಕೆ ಬೇಸತ್ತು ಡಾ. ರವೀಂದ್ರನಾಥ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಡಾ. ರವೀಂದ್ರನಾಥ ಅವರು ದಕ್ಷ, ಪ್ರಾಮಾಣಿಕ ಅಧಿಕಾರಿ. ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿದ್ದ ವೇಳೆ ನಕಲಿ ಎಸ್‍ಸಿ/ಎಸ್‍ಟಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು ಹಾಗೂ ಪಡೆದವರ ವಿರುದ್ಧ ಕ್ರಮ ಜರುಗಿಸಿದ್ದರು. ಶಾಸಕ ಎಂ.ಪಿ. ರೇಣುಕಾಚಾರ್ಯ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಸೇರಿ ಅನೇಕ ಪ್ರಭಾವಿಗಳ ನಕಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರದ ಸಂಬಂಧ ದಿಟ್ಟ ಕ್ರಮ ಕೈಗೊಂಡು ರಾಜ್ಯದಾದ್ಯಂತ ಸಂಚಲನ ಉಂಟು ಮಾಡಿದ್ದರು.

ರವೀಂದ್ರನಾಥ ಅವರನ್ನು ಅವಧಿಗೆ ಮುನ್ನವೇ ಏಕಾಏಕಿ ವರ್ಗಾವಣೆ ಮಾಡಿರುವುದು ಭ್ರಷ್ಟ ವ್ಯವಸ್ಥೆಗೆ ಹಿಡಿದ ಕೈನ್ನಡಿಯಾಗಿದೆ. ಇದರಿಂದ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರವೀಂದ್ರನಾಥ ಅವರ ರಾಜೀನಾಮೆ ಅಂಗೀಕರಿಸದೆ, ಅವರನ್ನು ಹಿಂದಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಹುದ್ದೆಯಲ್ಲೇ ಮುಂದುವರಿಸಲು ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಬೇಕು ಎಂದು ವಿನಂತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!