ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಪುರುಷರ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಗಮನಾರ್ಹ ಏರಿಕೆಯನ್ನು ಕಂಡಿದ್ದಾರೆ. ಅವರು 32 ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 32ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಅವರು ಸದ್ಯ ಪಾಯಿಂಟ್ಸ್ ಟೇಬಲ್‌ನಲ್ಲಿ 584 ಅಂಕಗಳನ್ನು ಹೊಂದಿದ್ದಾರೆ.
ಇನ್ನು ಪಾಕಿಸ್ತಾನ ತಂಡದ ಆಲ್‌ರೌಂಡರ್ ಸೈಯಮ್ ಆಯುಬ್ ಅವರು ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.
ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅವರು ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಅವರು ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಶ್ರೀಲಂಕಾ ಆರಂಭಿಕ ಬ್ಯಾಟ್ಸ್‌ಮನ್ ಪಥುಮ್ ನಿಸಾಂಕ ಅವರು ಐದನೇ ಸ್ಥಾನಕ್ಕೆ ಬಂದಿದ್ದಾರೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಆರನೇ ಸ್ಥಾನಕ್ಕೆ ಬಂದಿದ್ದರೆ, ನ್ಯೂಜಿಲೆಂಡ್ ಆರಂಭಿಕ ಟಿಮ್ ಸೀಫರ್ಟ್ ಅವರು 9ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.
ನಾಲ್ಕನೇ ಸ್ಥಾನಕ್ಕೆ ಆದಿಲ್ ರಶೀದ್
ಟಿ20ಐ ಬೌಲಿಂಗ್ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಎರಡು ಸ್ಥಾನಗಳನ್ನು ಏರಿಕೆ ಕಂಡು ನಾಲ್ಕನೇ ಸ್ಥಾನಕ್ಕೆ ಬಂದಿದ್ದಾರೆ. ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಂಟು ಸ್ಥಾನಗಳ ಜಿಗಿತದೊಂದಿಗೆ 23ನೇ ಸ್ಥಾನವನ್ನು ಪಡೆದಿದ್ದಾರೆ.
ಆಲ್‌ರೌಂಡರ್ ಶ್ರೇಯಾಂಕದಲ್ಲಿ ಸೈಮ್ ಆಯುಬ್‌ಗೆ ಅಗ್ರ ಸ್ಥಾನ
ಆಸ್ಟ್ರೇಲಿಯಾ ವಿರುದ್ಧದ ಬಲಿಷ್ಠ ತವರು ಸರಣಿಯ ಬಳಿಕ ಪಾಕಿಸ್ತಾನ ಆರಂಭಿಕ ಬ್ಯಾಟರ್ ಸೈಮ್ ಆಯುಬ್ ಐಸಿಸಿ ಪುರುಷರ ಟಿ20ಐ ಆಲ್‌ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಮರಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಯಲ್ಲಿ 23ರ ವಯಸ್ಸಿನ ಆಲ್‌ರೌಂಡರ್ ಸೈಯಮ್ ಆಯುಬ್, 119 ರನ್‌ಗಳು ಹಾಗೂ ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು. ಇವರ ಆಲ್‌ರೌಂಡರ್ ಆಟದ ನೆರವಿನಿಂದ ಪಾಕಿಸ್ತಾನ ತಂಡ, ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಆ ಮೂಲಕ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.



