ಹೊಸದಿಗಂತ ಡಿಜಿಟಲ್ ಡೆಸ್ಕ್:
ICC ಟಿ20 ಬ್ಯಾಟರ್‌ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಟೀಮ್ ಇಂಡಿಯಾದ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶರ್ಮಾ, ಈಗ 829 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೆ ಏರಿದ್ದಾರೆ.
ಅಭಿಷೇಕ್ ಶರ್ಮಾ ಈ ಮೂಲಕ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಟ್ರಾವಿಸ್ ಹೆಡ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಗೌರವವನ್ನು ಸಹ ಪಡೆದಿದ್ದಾರೆ.
ಇದಕ್ಕೂ ಮೊದಲು ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೊಹ್ಲಿ 2014ರಲ್ಲಿ 26ನೇ ವಯಸ್ಸಿನಲ್ಲಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದರು. ಆದರೆ ಇದೀಗ ಅಭಿಷೇಕ್ ಶರ್ಮಾ 24ನೇ ವಯಸ್ಸಿನಲ್ಲೇ ಈ ಸಾಧನೆ ಮಾಡುವ ಮೂಲಕ ಹೊಸ ದಾಖಲೆ ಬರೆಯುತ್ತಿದ್ದಾರೆ.
ಇನ್ನು ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಶ್ರೇಯಾಂಕಗಳಲ್ಲಿ ಅಗ್ರಸ್ಥಾನಕ್ಕೇರಿದ ಅತ್ಯಂತ ಕಿರಿಯ ಭಾರತೀಯ ಕ್ರಿಕೆಟಿಗನ ದಾಖಲೆಯು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿ ಉಳಿದಿದೆ. ಅವರು ಟೆಸ್ಟ್‌ನಲ್ಲಿ 21ನೇ ವಯಸ್ಸಿನಲ್ಲಿ ಹಾಗೂ ಏಕದಿನದಲ್ಲಿ 22ನೇ ವಯಸ್ಸಿನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದರು.
ಇದೀಗ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ ಮೊಟ್ಟಮೊದಲ ಹಾಗೂ ಅತ್ಯಂತ ಕಿರಿಯ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದು, ಭಾರತೀಯ ಕ್ರಿಕೆಟ್ ಲೋಕಕ್ಕೆ ಹೊಸ ಶಕ್ತಿ ತುಂಬಿದಂತಾಗಿದೆ.