Monday, October 13, 2025

ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌: ಪಾಕ್‌ಗೆ ಸವಾಲಿನ ಗುರಿ ನೀಡಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್

ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಹರ್ಲಿನ್ ಡಿಯೋಲ್, ಜೆಮಿಮಾ ರೋಡ್ರಿಗಸ್‌ ಹಾಗೂ ರಿಚಾ ಘೋಷ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಬದ್ದ ಎದುರಾಳಿ ಪಾಕಿಸ್ತಾನ ಎದುರು ಭಾರತ ತಂಡವು ನಿಗದಿತ 50 ಓವರ್‌ಗಳಲ್ಲಿ 10 ವಿಕೆಟ್ ಕಳೆದುಕೊಂಡು 247 ರನ್ ಬಾರಿಸಿದ್ದು, ಪಾಕ್‌ಗೆ ಸವಾಲಿನ ಗುರಿ ನೀಡಿದೆ

ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಭಾರತ ಮಹಿಳಾ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಸ್ಮೃತಿ ಮಂಧನಾ ಹಾಗೂ ಪ್ರತಿಕಾ ರಾವಲ್ ಮೊದಲ 9 ಓವರ್‌ಗೆ 48 ರನ್‌ಗಳ ಜತೆಯಾಟವಾಡಿದರು. ಸ್ಮೃತಿ ಮಂಧನಾ 32 ಎಸೆತಗಳನ್ನು ಎದುರಿಸಿ 23 ರನ್ ಗಳಿಸಿ ಪಾಕ್ ನಾಯಕಿ ಪಾತಿಮಾ ಸನಾಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಪ್ರತಿಕಾ ರಾವಲ್ 37 ಎಸೆತಗಳಲ್ಲಿ 5 ಬೌಂಡರಿ ಸಹಿತ 31 ರನ್ ಗಳಿಸಿ ಸಾದಿಯಾ ಇಕ್ಬಾಲ್ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

ಹರ್ಲಿನ್ ಡಿಯೋಲ್, ಇದೀಗ ಪಾಕಿಸ್ತಾನ ಎದುರು ಜವಾಬ್ದಾರಿಯುತ ಆಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಡಿಯೋಲ್, ಆ ಬಳಿಕ ರನ್ ಗಳಿಕೆಗೆ ಚುರುಕು ಮುಟ್ಟಿಸಿದರು. ಡಿಯೋಲ್ 65 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 46 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ನಾಯಕಿ ಹರ್ಮನ್‌ಪ್ರೀತ್ ಕೌರ್ 19 ರನ್ ಗಳಿಸಿ ನಿರಾಸೆ ಮೂಡಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೋಡ್ರಿಗಸ್ ಆಕರ್ಷಕ 32 ರನ್ ಸಿಡಿಸಿದರೆ, ಅನುಭವಿ ಆಲ್ರೌಂಡರ್ ದೀಪ್ತಿ ಶರ್ಮಾ 25 ಹಾಗೂ ಸ್ನೆಹ್ ರಾಣಾ 20 ರನ್ ಗಳಿಸುವ ಮೂಲಕ ತಂಡಕ್ಕೆ ಅಮೂಲ್ಯ ಕಾಣಿಕೆ ನೀಡಿದರು.

ಕೊನೆಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ರಿಚಾ ಘೋಷ್ ಕೇವಲ 20 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 35 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು.

error: Content is protected !!