ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಸಂಪತ್ತು ಸಮೀಕ್ಷೆ ಮಾಡಿ ಹಂಚುವ ವಿಚಾರ ವ್ಯಾಪಕ ಗೆದ್ದಲಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಯು-ಟರ್ನ್ ಹೊಡೆದಿದ್ದಾರೆ.
ದೆಹಲಿಯಲ್ಲಿ ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಸಂಪತ್ತು ಸಮೀಕ್ಷೆ ಮಾಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ದೇಶ ಎದುರಿಸುತ್ತಿರುವ ಅನ್ಯಾಯದ ಪ್ರಮಾಣವನ್ನು ಕಂಡು ಹಿಡಿಯಲು ಮಾತ್ರ ನಾನು ಬಯಸುತ್ತೇನೆ. ಆ ಅರ್ಥದಲ್ಲಿ ನಾನು ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸಂಪತ್ತು ಸಮೀಕ್ಷೆಯೂ ಆರ್ಥಿಕ ಮತ್ತು ಸಾಂಸ್ಥಿಕ ವರದಿಯನ್ನು ಒಳಗೊಂಡಿರುತ್ತದೆ. ಸಮಾಜದ ವಿವಿಧ ವಿಭಾಗಗಳು ವರ್ಷಗಳಲ್ಲಿ ಹೇಗೆ ಅಭಿವೃದ್ಧಿ ಹೊಂದಿದ್ದವು ಮತ್ತು ಎಲ್ಲಾ ಗುಂಪುಗಳಿಗೆ ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಏನು ಅಗತ್ಯವಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.
ಭಾರತದ ಶೇ.90ರಷ್ಟು ಜನತೆಗೆ ಅನ್ಯಾಯವಾಗುತ್ತಿದೆ. ಇದನ್ನು ನಾವು ತಿಳಿದುಕೊಳ್ಳಲು ಸಂಪತ್ತು ಹಾಗೂ ಜಾತಿ ಸಮೀಕ್ಷೆ ಕುರಿತು ಪ್ರಧಾನಿ ಪ್ರತಿಕ್ರಿಯಿಸಿದ ರೀತಿ ನೋಡಿ ನನಗೆ ಅವರ ಹೆದರಿರುವಂತೆ ಕಾಣುತ್ತಿದೆ. ಏಕೆಂದರೆ ಅವರು ನಾವು ಹೇಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಅವರು ನಮ್ಮ ಮೇಲೆ ದಾಳಿ ಮಾಡಿದ ರೀತಿ ನೋಡಿದರೆ ಅವರು ಹೆದರಿರುವುದು ಕಾಣುತ್ತದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳಿದ್ದೇನು?
ಏಪ್ರಿಲ್ 07ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಜಾತಿ ಹೊರತುಪಡಿಸಿ ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ಒಂದನ್ನು ನಡೆಸಲಾಗುವುದು ಎಂದು ಹೇಳಿದ್ದರು. ಇತ್ತ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರ ಹೇಳಿಕೆಯನ್ನೆ ಅಸ್ತ್ರ ಮಾಡಿಕೊಂಡ ಪ್ರಧಾನಿ ಮೋದಿ ಕೈ ಪಡೆ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದರು.