ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆಯಾಗುತ್ತಾರೆ ಎಂದುಸಚಿವ ಜಮೀರ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ವಿರೋಧಿಸಿ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಇಂದು ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.
ಸಿಎಂ ಪ್ರಸಿದ್ಧಿಯನ್ನು ಸಹಿಸಲು ಆಗದೇ, ಸರ್ಕಾರ ಉರುಳಿಸುವ ಯತ್ನ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಜನ ಯಾವತ್ತೂ ಬಹುಮತ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಸಿಎಂ ಆಗಿದ್ದಾಗ ಜೈಲಿಗೆ ಹೋಗಿದ್ದರು. ಯಾವ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಿರಿ? ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಲೋಕಾಯುಕ್ತರು ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಾರೆ. ಅದಕ್ಕೆ ನೀವು ಯಾಕೆ ಅನುಮತಿ ಕೊಟ್ಟಿಲ್ಲ ಎಂದು ಕಿಡಿಕಾರಿದರು.
ಬಿಜೆಪಿ, ಜೆಡಿಎಸ್ ಏನೇ ಮಾಡಿದರೂ ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನದಿಂದ ಕೆಳಗಿಸಲು ಆಗುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್, ರಾಜ್ಯದ 7 ಕೋಟಿ ಜನ ಸಿಎಂ ಪರವಾಗಿದ್ದಾರೆ. ಕರ್ನಾಟಕದ ಜನ ಸುಮ್ಮನೆ ಕೂರಲ್ಲ ಎಂದು ಸಚಿವ ಜಮೀರ್ ಅಹ್ಮದ್ ಎಚ್ಚರಿಕೆ ನೀಡಿದರು.