ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ, ವಿವಾದಕ್ಕೊಳಗಾಗಿರುವ ಮತದಾರರ ಪಟ್ಟಿಯನ್ನು ಮತ್ತೊಮ್ಮೆ ಮರು-ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸಿಎಂ ಮಾತನಾಡಿದರು.
ಸತ್ಯಾಸತ್ಯತೆ ಹೊರಬರಲಿ; ಮರು-ಪರಿಶೀಲನೆ ಅಗತ್ಯ
ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಪ್ರಶ್ನಾರ್ಹವಾಗಿದೆ. ಹೀಗಾಗಿ ಮುಖ್ಯ ಚುನಾವಣಾ ಅಧಿಕಾರಿಯನ್ನು ತಕ್ಷಣವೇ ಬಂಧಿಸಿ, ವಜಾ ಮಾಡಬೇಕು. ಮತದಾರರ ಪಟ್ಟಿಯ ಸಂಪೂರ್ಣ ಮರು-ಪರಿಶೀಲನೆಯಾಗಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ದಿನೇಶ್ ಗುಂಡೂರಾವ್ ಕಿಡಿ
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಯಾರಿಗೂ ನಂಬಿಕೆಯಿಲ್ಲದ ವ್ಯಕ್ತಿ ಇಂತಹ ಪ್ರಮುಖ ಸಾಂವಿಧಾನಿಕ ಸಂಸ್ಥೆಯ ಮುಖ್ಯಸ್ಥರಾಗಿ ಮುಂದುವರಿಯಲು ಹೇಗೆ ಸಾಧ್ಯ? ಪ್ರಜಾಪ್ರಭುತ್ವ ಮತ್ತು ಸಂಸ್ಥೆಗಳನ್ನು ಉಳಿಸಲು ಜ್ಞಾನೇಶ್ ಕುಮಾರ್ ತಾವಾಗಿಯೇ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕು ಎಂದರು. ಅಲ್ಲದೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ಈ ಗಂಭೀರ ವಿಚಾರದಲ್ಲಿ ಆತ್ಮಾವಲೋಕನ ಮಾಡಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಎಚ್.ಕೆ. ಪಾಟೀಲ್ ಆಕ್ರೋಶ
ಮಾಜಿ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ಕಾನೂನಿನ ಆಡಳಿತ ಮತ್ತು ಪ್ರಜಾಪ್ರಭುತ್ವದ ಮೇಲೆ ಗೌರವವಿದ್ದರೆ ಸಿಇಸಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನಂದಿನಿ ಹಾಲು ದರ ಏರಿಕೆ ಕುರಿತು ಸಿಎಂ ಪ್ರತಿಕ್ರಿಯೆ
ಇದೇ ವೇಳೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾಪದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, ʼಹಾಲಿನ ದರವನ್ನು 10 ರೂಪಾಯಿ ಹೆಚ್ಚಿಸುವಂತೆ ಬೇಡಿಕೆ ಬಂದಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಬೆಲೆ ಹೆಚ್ಚಾಗಿದೆ, ಅಲ್ಲಿನ ದರಗಳ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ. ನಮ್ಮ ರಾಜ್ಯದ ರೈತರು ಪ್ರಸ್ತುತ ಇರುವ ದರದ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.



