ಹೊಸದಿಗಂತ ವರದಿ , ಮಡಿಕೇರಿ:
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಚಾಲನೆ ದೊರೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮಹಿಳೆಯರ ಅನುಕೂಲಕ್ಕಾಗಿ 103 ಬಸ್’ಗಳನ್ನು ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಆದ್ದರಿಂದ ಆಗಸ್ಟ್ 30 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ, ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ನಿಗಮದ ಸಾರಿಗೆ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿರುವ ಕ.ರಾ.ರ.ಸಾ.ನಿ.ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಅವರು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸುವಂತೆ ಕೋರಿದ್ದಾರೆ.