ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿದ್ದು ಗುರುವಾರ ಮೈಕ್ರೋ ಫೈನಾನ್ಸ್ ಬಿಲ್ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕ್ಯಾಬಿನೆಟ್ ಅಜೆಂಡಾದಲ್ಲಿ ಸುಗ್ರೀವಾಜ್ಞೆ ವಿಷಯ ಸೇರ್ಪಡೆ ಮಾಡಿದೆ. ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಮತ್ತು ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸಿದ್ಧವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತಾ ವಿಷಯವಾಗಿ ಬಿಲ್ ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ.
ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗಟ್ಟಲು ಶೀಘ್ರದಲ್ಲಿ ಹೊಸ ಕಾನೂನು ತರಲು ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಮುಂದಿನ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದರು.