ಮಾರ್ಚ್‌ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್‌ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗೃಹ ಆರೋಗ್ಯ’ ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಿರುವ ಯೋಜನೆ ಇದಾಗಿದೆ.ಗೃಹ ಆರೋಗ್ಯ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು. ಈ ಯೋಜನೆಯನ್ನು ಮೊದಲಿಗೆ ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿತ್ತು. ಇಲ್ಲಿ ಯೋಜನೆ ಯಶಸ್ವಿಯಾಗಿದ್ದು, ಮಾರ್ಚ್ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ಯೋಜನೆಯಡಿ ಮನೆಗಳಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ 30 ವರ್ಷ ದಾಟಿದವರನ್ನು ತಪಾಸಣೆಗೆ ಒಳಪಡಿಸಿ ಅವರಿಗೆ ಏನಾದರೂ ಸಮಸ್ಯೆ ಇದ್ದರೆ ಉಚಿತವಾಗಿ ಚಿಕಿತ್ಸೆ, ಔಷಧ ನೀಡುತ್ತಾರೆ. ಹಿಂದೆ ಗ್ರಾಮೀಣ ಪ್ರದೇಶದ ಜನರು ಆರೋಗ್ಯ ತಪಾಸಣೆಗಾಗಿ ತಾಲ್ಲೂಕು ಆಸ್ಪತ್ರೆಗೆ ಅಲೆಯಬೇಕಿತ್ತು. ಬಿಪಿ, ಶುಗರ್ ಕಾಯಿಲೆ ಇದ್ದರೂ ತಪಾಸಣೆ ಮಾಡಸದೆ ನಿರ್ಲಕ್ಷ್ಯ ಮಾಡುತ್ತಿದ್ದರು. ಇದನ್ನು ಮನಗಂಡು, ಆರಂಭದಲ್ಲಿಯೇ ಇಂತಹ ಕಾಯಿಲೆಗಳನ್ನು ತಡೆಯುವುದು ಗೃಹ ಆರೋಗ್ಯ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!