Thursday, September 4, 2025

ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಸಿಎಂ ಸಿದ್ದರಾಮಯ್ಯ ಸಹಿತ ಪ್ರಮುಖ ನಾಯಕರು ಭಾಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ಏರ್ಪಡಿಸಲಾಗಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೈತ್ರಿಕೂಟದ ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದೆ .

ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನದ ಗಂಭೀರ ಆರೋಪ ಮಾಡಿರುವ ರಾಹುಲ್‌ ಗಾಂಧಿ, ನಾಳೆ (ಆ.8-ಶುಕ್ರವಾರ) ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

ನಾಳೆ ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್‌ ಗಾಂಧಿ ಒಟ್ಟಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದ್ದು, ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯಲಿರುವ ಪ್ರತಿಭಟನೆ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳು ನಡೆಯುತ್ತಿವೆ.

ಇನ್ನು ರಾಹುಲ್‌ ಗಾಂಧಿ ನಿವಾಸದಲ್ಲಿ ನಡೆಯುತ್ತಿರುವ ಇಂಡಿಯಾ ಬ್ಲಾಕ್ ಸಭೆಯಲ್ಲಿ, ಬಿಹಾರದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಭಾಗವಹಿಸಿದ್ದಾರೆ. ಆರ್‌ಜೆಡಿ ಬಿಹಾರದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಗೆ ಭಾರೀ ವಿರೋಧ ವ್ಯಕ್ತಪಡಿಸಿದೆ. ಎಂಎನ್‌ಎಂ ಮುಖ್ಯಸ್ಥ ಕಮಲ್‌ ಹಾಸನ್‌ ಅವರು ರಾಹುಲ್‌ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ-ಎಸ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಡಿಎಂಕೆ ಸಂಸದ ತಿರುಚಿ ಶಿವ ಮತ್ತು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ