Friday, July 1, 2022

Latest Posts

ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಕೋವಿಡ್ ಪರೀಕ್ಷೆ ನಡೆಸಿ: ತಾಲೂಕು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಸೇರಿದಂತೆ ಕೆಲವು ಕಡೆಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇಂತಹ ಪ್ರದೇಶದ ಗ್ರಾಮಗಳ ಮನೆ ಮನೆಗೆ ತೆರಳಿ ರ‍್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಿ ಸೋಂಕಿನ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವಂತೆ ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ತಹಶೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಜೊತೆ ಗುರುವಾರ ವೀಡಿಯೋ ಸಂವಾದಲ್ಲಿ ಅವರು ಮಾತನಾಡಿದರು.
ಸೋಂಕಿತರನ್ನು ಅನವಶ್ಯಕವಾಗಿ ಗೃಹ ಸಂಪರ್ಕ ತಡೆಯಲ್ಲಿರಿಸದೆ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಇದರಿಂದ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಂಚಾರಿ ಆರೋಗ್ಯ ತಂಡ ಸರಿಯಾಗಿ ಕೆಲಸ ಮಾಡಿದರೆ ಗ್ರಾಮ ಮಟ್ಟದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿದೆ. ರ‍್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಕೋವಿಡ್-19 ಪ್ರಕರಣ ಸಂಬoಧಿಸಿದoತೆ ಸೋಮವಾರಪೇಟೆ ತಾಲೂಕಿನಲ್ಲಿ ಕೆಲವು ಗ್ರಾಮಗಳನ್ನು ಹಾಟ್‌ಸ್ಪಾಟ್ ಪ್ರದೇಶವೆಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿ ಮಾಡಬೇಕು ಎಂದು ಚಾರುಲತಾ ಸೋಮಲ್ ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು, ಕೋವಿಡ್ ಪರೀಕ್ಷೆ ಹೆಚ್ಚು ಮಾಡಬೇಕು. ಗ್ರಾಮಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಕೋವಿಡ್ 19 ನಿಯಂತ್ರಣ ಸಂಬoಧಿಸಿದoತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಹಲವು ಮಾಹಿತಿ ನೀಡಿದರು.
ಮಳೆ ಬಗ್ಗೆ ಎಚ್ಚರವಹಿಸಿ : ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರಲತಾ ಸೋಮಲ್ ಅವರು, ಕೊಡಗು ಜಿಲ್ಲೆಯಲ್ಲಿ ಇದೇ ಜೂನ್ 12 ಮತ್ತು 13 ರಂದು ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಸಿಸಲಾಗಿದೆ. ಆದ್ದರಿಂದ ಎಲ್ಲರೂ ಎಚ್ಚರ ವಹಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ ಪ್ರಾಕೃತಿಕ ವಿಕೋಪ ಸಂಬoಧಿಸಿದoತೆ ಜಿಲ್ಲೆಯಲ್ಲಿ 51 ಗ್ರಾ.ಪಂ.ಗಳ 72 ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಹಾಗೆಯೇ 57 ಗ್ರಾಮಗಳನ್ನು ಪ್ರವಾಹ ಪೀಡಿತ ಮತ್ತು 23 ಪ್ರದೇಶಗಳನ್ನು ಭೂಕುಸಿತ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಾಗೆಯೇ ಜಿಲ್ಲೆಯ 18 ಕಡೆಗಳಲ್ಲಿ ತಾತ್ಕಾಲಿಕ ಗೋಶಾಲೆ ತೆರಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಹಾರ ಕೇಂದ್ರಗಳಲ್ಲಿ ಕನಿಷ್ಟ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆ, ಶೌಚಾಲಯ, ವೈದ್ಯಕೀಯ ಕಿಟ್, ವೈಯಕ್ತಿಕ ಸ್ವಚ್ಚತೆ ಹೀಗೆ ಹಲವು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 50 ಸಾವಿರ ರೂ ಬಿಡುಗಡೆ ಮಾಡಲಾಗಿದ್ದು, ಅಗತ್ಯ ಮುನ್ನೆಚ್ಚರ ವಹಿಸಬೇಕು. ನೋಡಲ್ ಅಧಿಕಾರಿಗಳು ಆಗಾಗ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಪಂ.ಉಪ ಕಾರ್ಯದರ್ಶಿ ಲಕ್ಷ್ಮಿ , ತಹಶೀಲ್ದಾರ್ ಮಹೇಶ್, ನೋಡಲ್ ಅಧಿಕಾರಿಗಳಾದ ಪಿ.ಶ್ರೀನಿವಾಸ್, ಶಶಿಧರ್, ಶ್ರೀಕಂಠಯ್ಯ, ಲಿಂಗರಾಜು, ಶೇಖರ್, ಡಾ.ಆನಂದ, ಡಾ.ಮಹೇಶ್, ಕೆ.ಟಿ.ದರ್ಶನಾ, ಶಿವರಾಮ್, ಎಸ್.ವಿ.ರಾಮದಾಸ್, ನಟರಾಜು, ಅನನ್ಯ ವಾಸುದೇವ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss