ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಬಿಸಿಲು ಇದ್ದರೆ ಮಧ್ಯಾಹ್ನದ ಸಮಯ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.