ಹೊಸದಿಗಂತ ವರದಿ, ಹಾಸನ:
ಜಿಲ್ಲೆಯ ಸಕಲೇಶಪುರ, ಆಲೂರು, ಹಾಸನ, ಬೇಲೂರು, ಅರಕಲಗೂಡಿನಲ್ಲಿ ವರುಣನ ಅಬ್ಬರ, ಜನಜೀವನ ಸಂಪೂರ್ಣ ಅಸ್ತವ್ಯಸ್ತ-ಮಲೆನಾಡು ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ-ಹೇಮಾವತಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆಯಾಗಿದ್ದು 65 ಕ್ಯೂಸೆಕ್ ನೀರನ್ನು ಹೊರಬಿಡಲಾಗಿತ್ತಿದೆ.
ಭಾರೀ ಮಳೆಯಿಂದಾಗಿ ಬೆಳೆದು ನಿಂತ ಶುಂಠಿ, ಭತ್ತ, ಮತ್ತು ಜೋಳದ ಬೆಳೆಗಳಿಗೆ ಹಾನಿ ಉಂಟಾಗಿದೆ. ಅರಕಲಗೂಡು ಮತ್ತು ಸಕಲೇಶಪುರ, ಬೇಲೂರು ಆಲೂರಿನ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ. ಇನ್ನೂ ಮಳೆಯಿಂದ ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಮತ್ತು ಅಧಿಕಾರಿಗಳು ಅತಿವೃಷ್ಠಿಗೆ ಪರಿಹಾರ ಕಾರ್ಯಗಳಿಗೆ ಮುಂದಾಗಿದ್ದು, ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ ಭಾಗದಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ವರ್ಷಧಾರೆಯಿಂದ ಹೇಮಾವತಿ ಜಲಾಶಯಕ್ಕೆ ಒಳಹರಿವು ಭಾರಿ ಏರಿಕೆಯಾಗುತ್ತಿದೆ. ಒಳಹರಿವು ಹೆಚ್ಚಾದ ಹಿನ್ನಲೆ 65 ಕ್ಯೂಸೆಕ್ ನೀರನ್ನು ಹೊರ ಬಿಡುಗಡೆ. ಆರು ಕ್ರಸ್ಟ್ ಗೇಟ್‌ಗಳ ಮೂಲಕ 65 ಸಾವಿರ ಕ್ಯೂಸೆಕ್ ನೀರನ್ನ ಬಿಡುಗಡೆ ಮಾಡುತ್ತಿದ್ದು,ಹೇಮಾವತಿ ನದಿಯ ತಗ್ಗು ಪ್ರದೇಶದ ಮತ್ತು ನದಿಯ ಎರಡು ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ, ಅಲ್ಲದೇ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸೂಚನೆ ನೀಡಿದ್ದಾರೆ.
ಬೇಲೂರು ಯಗಚಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಐದು ಕ್ರಸ್ಟ್ ಗೇಟ್‌ಗಳ ಮೂಲಕ ಜಲಾಶಯದಿಂದ ನೀರನ್ನು ಹೊರಬಿಡ ಲಾಗುತ್ತಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 3.603 ಟಿಎಂಸಿ ಇದ್ದು ಸದ್ಯ ಜಲಾಶಯದಲ್ಲಿರುವ ನೀರು 3.441 ಟಿಎಂಸಿ ಇದೆ. ಯಗಚಿ ಜಲಾಶಯದ ಗರಿಷ್ಠ ಮಟ್ಟ 3164.90 ಅಡಿ ಇದ್ದು ಇಂದಿನ ನೀರಿನ ಮಟ್ಟ – 3164.13 ಅಡಿ ತಲುಪಿದೆ. ಒಳಹರಿವು – 1280 ಕ್ಯೂಸೆಕ್ ಇದೆ. 1000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಆರು ತಾಲೂಕಿಗೆ ರಜೆ ಘೋಷಣೆ
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಆರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ.ಪಾಂಡು ಆದೇಶಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಅರಕಲಗೂಡು ಹಾಗು ಹೊಳೆನರಸೀಪುರ ಶಾಲೆಗಳಿಗೆ ರಜೆ ಘೋಷಿಸಿದ್ದು, ಶುಕ್ರವಾರದ ಪಾಠಗಳನ್ನು ಆ. 24ರಂದು ಸರಿದೂಗಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕೊಚ್ಚಿಹೋದ 12 ಎಕರೆ ನಾಟಿ ಮಾಡಿದ್ದ ಭತ್ತದ ಸಸಿಗಳು
ಬೇಲೂರು ತಾಲ್ಲೂಕಿನ, ಅರೇಹಳ್ಳಿ ಗ್ರಾಮದಲ್ಲಿ ಐಬಿಸಿ ಎಸ್ಟೇಟ್ ವ್ಯಾಪ್ತಿಯಲ್ಲಿರುವ ಕೆರೆ ಒಡೆದು ಉತ್ತೊಳಲು ಗ್ರಾಮದ ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಸುಮಾರು ಹನ್ನೆರಡು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತದ ಸಸಿಗಳು ಸಂಪೂರ್ಣ ಕೊಚ್ಚಿಹೋಗಿವೆ. ಗ್ರಾಮದ ಮಂಜಪ್ಪ, ಚಂದ್ರೇಗೌಡ, ಬಸವರಾಜು, ಸೀತಮ್ಮ, ಯು.ಎಂ.ಇಂದಿರಾ, ಯು.ಡಿ.ಮಂಜುನಾಥ್ ಎಂಬುವವರಿಗೆ ಸೇರಿದ ಜಮೀನು. ಜಮೀನಿಗೆ ನೀರು ನುಗ್ಗಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.
ಹಾಸನ ನಗರದ ಜಿಲ್ಲಾ ಕ್ರೀಡಾಂಗಣದ ಫುಟ್ಬಾಲ್ ಕೋರ್ಟ್ ಬಳಿ ಬಾರಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಧರೆಗುರುಳಿದೆ. ಮಳೆ ಬರುತ್ತಿದ್ದ ಕಾರಣ ಬೆಳಿಗ್ಗೆ ಕ್ರೀಡಾಂಗಣಕ್ಕೆ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಬಾರದ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿದೆ ದುರಂತ ತಪ್ಪಿದೆ.