ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆ ಆಯೋಜಿಸಲು ಕೇಂದ್ರ ಅಸ್ತು

ಹೊಸ ದಿಗಂತ ವರದಿ, ಹುಬ್ಬಳ್ಳಿ :

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲು ಮುಂದಾಗಿರುವುದು ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರ ಎಂದು ಹೇಳಿದ್ದಾರೆ.

‘ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರವೊಂದು ಇಂತಹ ನಿರ್ಣಯ ಕೈಗೊಂಡು ಸ್ಥಳೀಯ ಭಾಷೆಗಳಿಗೆ ಗೌರವ ನೀಡುವ ಹಾಗೂ ಅಭಿವೃದ್ಧಿಗೆ ಪೂರಕವಾದ ಕಾರ್ಯವನ್ನು ಮಾಡಿದೆ. ಈ ನಿರ್ಣಯದಿಂದ ರಾಜ್ಯದ ಹೆಚ್ಚು ಅಭ್ಯರ್ಥಿಗಳಿಗೆ ಈ ಸೇವೆಗೆ ಸೇರುವ ಅವಕಾಶ ದೊರೆಯಲಿದೆ’ ಎಂದು ತಿಳಿಸಿದ್ದಾರೆ.

‘ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸುತ್ತೇನೆ’ ಎಂದಿದ್ದಾರೆ.

‘ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್, ಭಾರತೀಯ ಭಾಷೆಗಳ ಬೆಳವಣಿಗೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಲೇ ಇಲ್ಲ. ಆದರೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ದೇಶದ ಎಲ್ಲ ಭಾಷೆಗಳಲ್ಲಿ ನಡೆಸುವ ಮೂಲಕ ಭಾಷಾ ಬೆಳವಣಿಗೆಗೆ ಪ್ರೋತ್ಸಾಹದ ಜತೆಗೆ ಸ್ಥಳೀಯರಿಗೆ ಉದ್ಯೋಗಕ್ಕೆ ನೆರವಾಗಿದೆ’ ಎಂದು ಕೊಂಡಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!