ಹೊಸದಿಗಂತ ವರದಿ,ಮಡಿಕೇರಿ:
ವನ್ಯಪ್ರಾಣಿಗಳಿಗೆ ಬಲಿಯಾದವರ ಕುಟುಂಬದವರಿಗೆ ಪ್ರಸಕ್ತ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಲು ಮತ್ತು ಹುಲಿ ದಾಳಿಗೆ ಮೃತಪಟ್ಟವರ ಕುಟುಂಬದವರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಗರದ ಅರಣ್ಯ ಭವನದಲ್ಲಿ ರೈತರು ಹಾಗೂ ಬೆಳೆಗಾರ ಪ್ರಮುಖರ ಜೊತೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಇನ್ನಷ್ಟು ಚುರುಕುಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನಹರಿಸಲಾಗುವುದು. ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿರುವ ಮರ ಕಡಿಯಲು ಅನುಮತಿ ನೀಡುವ ನಿಟ್ಟಿನಲ್ಲಿ ನಿಯಮವನ್ನು ಸರಳೀಕರಿಸಲಾಗುವುದು ಎಂದು ಉಮೇಶ್ ಕತ್ತಿ ಹೇಳಿದರು.
100 ಕೋಟಿ ಅನುದಾನ: ಕಾಡಾನೆ ಹಾವಳಿ ನಿಯಂತ್ರಣ ಸಂಬಂಧ ಬ್ಯಾರಿಕೇಡ್ ನಿರ್ಮಾಣಕ್ಕೆ ಸರ್ಕಾರ ಈ ಬಾರಿ 100 ಕೋಟಿ ರೂ. ಪ್ರಕಟಿಸಿದೆ. ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ಹಣ ತರಿಸಲು ಪ್ರಯತ್ನಿಸಲಾಗುವುದು ಎಂದು ಅರಣ್ಯ ಸಚಿವರು ನುಡಿದರು.
700 ಕೋಟಿ ಅಗತ್ಯ: ಸಭೆಯ ಆರಂಭದಲ್ಲಿ ಮಾತನಾಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ವಿಜಯ್ ಕುಮಾರ್ ಗೋಗಿ ಅವರು, ವನ್ಯಜೀವಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ಸಮಗ್ರವಾದ ಡಿಪಿಆರ್ ತಯಾರಿಸಲಾಗಿದೆ. ಆ ನಿಟ್ಟಿನಲ್ಲಿ 700 ಕೋಟಿ ರೂ. ಅನುದಾನ ದೊರೆತಲ್ಲಿ ರೈಲು ಬ್ಯಾರಿಕೇಡ್ ನಿರ್ಮಾಣ ಮಾಡಿ ಕಾಡಾನೆ ಹಾವಳಿಯನ್ನು ಶೇ.90ರಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ ಎಂದು ಹೇಳಿದರು.
ಈ ಹಿಂದೆ ಸರ್ಕಾರ ವನ್ಯಪ್ರಾಣಿಗಳ ಹಾವಳಿ ನಿಯಂತ್ರಿಸಲು ಪ್ರತೀ ವರ್ಷ 50 ಕೋಟಿ ರೂ. ಒದಗಿಸುತ್ತಿತ್ತು, ಈ ಬಾರಿ 100 ಕೋಟಿಯನ್ನು ಬಜೆಟಿನಲ್ಲಿ ಘೋಷಿಸಿದೆ. ಆ ನಿಟ್ಟಿನಲ್ಲಿ ವನ್ಯಪ್ರಾಣಿಗಳ ಹಾವಳಿ ತಡೆಯಲು ಶ್ರಮಿಸಲಾಗುವುದು. ಇದೇ ರೀತಿ ಇನ್ನೂ ಏಳು-ಎಂಟು ವರ್ಷಗಳ ಕಾಲ ಅನುದಾನ ಒದಗಿಸಿದಲ್ಲಿ ವನ್ಯಪ್ರಾಣಿಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು ಎಂದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ವಿಜಯ್ ಕುಮಾರ್ ಗೋಗಿ, ಸರಸ್ವತಿ ಮಿಶ್ರಾ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಕಾ.ರಾಮೇಶ್ವರಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಇದ್ದರು.
ವಿವಿಧ ಬೆಳೆಗಾರ ಸಂಘಟನೆಗಳ ಪ್ರಮುಖರು, ರೈತ ಸಂಘದ ಪದಾಧಿಕಾರಿಗಳು ವನ್ಯಜೀವಿ ಮಾನವ ಸಂಘರ್ಷ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಲವು ಸಲಹೆಗಳನ್ನು ನೀಡಿದರು.