ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಅವರು, ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಸ್ಪೀಕರ್ ಗೆ ರಾಜೀನಾಮೆ ಹಸ್ತಾಂತರ
ಸ್ಪೀಕರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಪಾಟೀಲ್ ಅವರು ಇಂಡಿ ಹಾಗೂ ಚಡಚಣ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯನ್ನು ಉಲ್ಲೇಖಿಸಿದ್ದಾರೆ. ಮಳೆ ಕೊರತೆಯಿಂದ ಬೆಳೆಗಳು ಒಣಗಿದ್ದು, ಬೀಜ ಮತ್ತು ರಸಗೊಬ್ಬರ ಖರೀದಿಗಾಗಿ ಸಾಲ ಮಾಡಿಕೊಂಡಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯೂ ಜನರನ್ನು ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ
ಈ ಹಿಂದೆ ಆಗಸ್ಟ್ 28ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಎರಡೂ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದಾಗಿ ಪಾಟೀಲ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇಂಡಿ ಮತ್ತು ಚಡಚಣ ಮಾತ್ರ ಪಟ್ಟಿಯಿಂದ ಹೊರಗುಳಿದಿವೆ ಎಂಬುದು ಅವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ.
ಆಡಳಿತ ಪಕ್ಷದ ಶಾಸಕನಾಗಿದ್ದರೂ ಸರ್ಕಾರಕ್ಕೆ ಮುಜುಗರವಾಗದ ರೀತಿಯಲ್ಲಿ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ ತಮ್ಮ ಮಾತುಗಳಿಗೆ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಪಾಟೀಲ್ ರಾಜೀನಾಮೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರು ತಮ್ಮ ಮೇಲೆ ಇಟ್ಟಿರುವ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣವನ್ನೂ ಅವರು ನೀಡಿದ್ದಾರೆ.
ಯಶವಂತರಾಯಗೌಡ ಪಾಟೀಲ್ ಅವರು ಈ ಹಿಂದೆ ಆಗಸ್ಟ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಳಿಕ ಅದನ್ನು ಹಿಂಪಡೆದಿದ್ದರು. ಇದೀಗ ಬರಪೀಡಿತ ತಾಲೂಕುಗಳ ವಿಚಾರದಲ್ಲಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿರುವುದು ಕಾಂಗ್ರೆಸ್‌ನೊಳಗಿನ ಅಸಮಾಧಾನ ಮುನ್ನೆಲೆಗೆ ಬಂದಂತಾಗಿದೆ.



