ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಬಿಗ್ ಮ್ಯಾಚ್ ಗೆ ನವಿ ಮುಂಬೈ ಡಿವೈ ಪಾಟೀಲ್ ಮೈದಾನ ಸಜ್ಜಾಗಿದೆ.
ಎರಡೂ ತಂಡಗಳು ಚೊಚ್ಚಲ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇನ್ನು ಈ ಐತಿಹಾಸಿಕ ಫೈನಲ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಫೈನಲ್ ಪಂದ್ಯದ ಟಿಕೆಟ್‌ಗಳನ್ನು ಐಸಿಸಿ ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅವು ಸೋಲ್ಡ್ ಔಟ್ ಆಗಿವೆ. ಈಗ ಥರ್ಡ್ ಪಾರ್ಟಿ (ಅನಧಿಕೃತ) ವೆಬ್ ಸೈಟ್‌ಗಳು ಪಂದ್ಯದ ಟಿಕೆಟ್‌ಗಳನ್ನು ದುಬಾರಿ ಮೊತ್ತಕ್ಕೆ ಮಾರಾಟ ಮಾಡುತ್ತಿವೆ. ವರದಿಯೊಂದರ ಪ್ರಕಾರ, ವೆಬ್‌ಸೈಟ್‌ವೊಂದು ಟಿಕೆಟ್‌ಗಳ ದರವನ್ನು ₹16,500ರಿಂದ ₹1,36,000 ವರೆಗೂ ನಿಗದಿ ಮಾಡಿದೆ ಎನ್ನಲಾಗಿದೆ.
ಟಿಕೆಟ್‌ಗಾಗಿ ಭಾರೀ ಬೇಡಿಕೆಯಿದ್ದು, ಶನಿವಾರವೂ ಡಿ.ವೈ.ಪಾಟೀಲ್ ಕ್ರೀಡಾಂಗಣದ ಎದುರು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಟಿಕೆಟ್ ಖರೀದಿಸಲು ಓಡಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಇನ್ನು, ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಭಾರತದ ನಾಯಕಿ ಹರ್ಮನ್ ಪ್ರೀತ್ ತಾವು ತಮ್ಮವರಿಗೆ ಟಿಕೆಟ್‌ಗಳನ್ನು ಹೊಂದಿಸಲು ಹರಸಾಹಸ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಭಾರತ ತಂಡ 3ನೇ ಬಾರಿಗೆ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಡಲಿದೆ. ತಂಡ ಈ ಹಿಂದೆ 2005, 2017ರ ವಿಶ್ವಕಪ್ ಫೈನಲ್‌ಗಳಲ್ಲಿ ಸೋತಿತ್ತು. ಇನ್ನು 2020ರ ಟಿ20 ವಿಶ್ವಕಪ್ ಫೈನಲ್‌ನಲ್ಲೂ ಮುಗ್ಗರಿಸಿತ್ತು. ಮತ್ತೊಂದೆಡೆ ದ.ಆಫ್ರಿಕಾ ಇದೇ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಫೈನಲ್‌ಗೇರಿದೆ. ಆದರೆ ತಂಡ ಕಳೆದೆರಡು ಆವೃತ್ತಿಗಳ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಸೋತು ರನ್ನರ್-ಅಪ್ ಆಗಿತ್ತು. ಹೀಗಾಗಿ, ಎರಡೂ ತಂಡಗಳು ಯಾವುದೇ ಮಾದರಿ ಯಲ್ಲಿ ಚೊಚ್ಚಲ ವಿಶ್ವಕಪ್ ಗೆಲ್ಲುವ ತವಕದಲ್ಲಿವೆ.

