Tuesday, February 27, 2024

ವಿಶ್ವ ಬೆರಗಾಗುವಂತಹುದು ಭಾರತ ಸಂವಿಧಾನ : ಸಚಿವ ಡಾ.ಶರಣಪ್ರಕಾಶ ಪಾಟೀಲ

ಹೊಸದಿಗಂತ ವರದಿ ರಾಯಚೂರು :

ವಿಶ್ವವೇ ಬೆರಗಾಗುವಂತಹ, ವಿಶ್ವದಲ್ಲಿನೇ ಸರ್ವ ಶ್ರೇಷ್ಠವಾದುದು ಭಾರತದ ಸಂವಿಧಾನ. ಸಂವಿಧಾನದ ಪ್ರತಿಯೊಂದು ಶಬ್ಧದ ಕುರಿತು ವಿವರಣೆಯನ್ನು ನೀಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ ನೇತೃತ್ವದಲ್ಲಿ ಭಾರತೀಯ ಸಂವಿಧಾನವನ್ನು ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೭೫ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಮಾನತೆಯ ಫಲ ದೊರೆಯಬೇಕೆಂಬ ಮೂಲ ಆಶಯ ಸಂವಿಧಾನದ್ದಾಗಿದೆ ಎಂದರು.

ಎಲ್ಲ ರಂಗಗಳಲ್ಲಯೂ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂವಿಧಾನಕ್ಕೆ ತಿದ್ದುಪಡಿ ತಂದು 371(ಜೆ) ಕನೂನನ್ನು ರೂಪಿಸಲಾಗಿದೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತರಾಗುತ್ತಿದ್ದರು. ಇದನ್ನು ಮನಗಂಡ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ 371(ಜೆ) ಅನ್ನು ಕೇಂದ್ರ ಸರ್ಕಾರ ಜಾರಿಗೆ ತರುವಂತೆ ಮಲ್ಲಿಕಾರ್ಜುನ ಖರ್ಗೆ ಮಾಡಿದ ಫಲವಾಗಿ ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತಿದೆ ಎಂದರು.

ಇದು ಜಾರಿಗೆ ಬಂದಿದ್ದರಿಂದ ಈ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ, ನೀರಾವರಿ ಸೌಲಭ್ಯಗಳ ಜಾರಿ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸುವುದಕ್ಕೆ ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಿಂದ ಎಷ್ಟು ಜನರಿಗೆ ಪ್ರಯೋಜನವಾಗುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದರು. ಜಿಲ್ಲೆಯ ಅಭಿವೃದ್ಧಿಗೆ ಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ್, ಜಿ.ಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಂ, ಎಸ್ಪಿ ನಿಖಿಲ್.ಬಿ ಸೇರಿದಂತೆ ಇತರರಿದ್ದರು.

ಪೊಲೀಸ್, ಗೃಹ ರಕ್ಷಕದಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳ ಒಟ್ಟು 13 ತಂಡಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಸಚಿವರು ಪಥ ಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿದರು. ನುರಾರು ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶನ ಜರುಗಿದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!