ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ: ನ್ಯಾಯಾಧೀಶರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ, ಬಳ್ಳಾರಿ:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು, ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿ ಕಾನೂನು ಬದ್ದವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಜಿಲ್ಲಾ ಸಮೀತಿ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾದಿಕಾರಿ ಕಚೇರಿ ಬಳಿ ಜಮಾಯಿಸಿದ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಜಿಲ್ಲಾ ನ್ಯಾಯಾಧೀಶರ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎಸ್.ಚಿದಾದಪ್ಪ ಅವರು ಮಾತನಾಡಿ, ಗಣರಾಜ್ಯೋತ್ಸವ ದಿನದಂದು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು, ಡಾ.ಬಿ.ಆರ್.ಅಂಬೇಡ್ಕರ್ ‌ಅವರಿಗೆ ಅಪಮಾನ ‌ಮಾಡಿದ್ದು, ತೀರಾ ಖಂಡನೀಯ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಎನ್ನುವುದನ್ನು ಮರೆತ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾರ್ಯಾಧ್ಯಕ್ಷ ಎಂ.ವಿ.ಎರುಕಲಸ್ವಾಮೀ ಅವರು‌ ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಾಲಯದಿಂದ ಹಿಡಿದು ಮುನ್ಸೀಫ್ ಕೋರ್ಟ್ ವರೆಗೆ ಸಂವಿಧಾನದ ಆಧಾರದ ಮೇಲೆ ಕಾರ್ಯಕಲಾಪಗಳು ನಡೆಯುತ್ತಿವೆ, ಇಂತಹದರಲ್ಲಿ ದೇಶದ ಸಂವಿಧಾನ ಬರೆದ ಅಂಬೇಡ್ಕರ್ ಅವರಿಗೆ ಅದರಲ್ಲೂ ನ್ಯಾಯಾಧೀಶರು ಅಪಮಾನ ಮಾಡಿರುವುದು ಖಂಡನೀಯ, ಕೂಡಲೇ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಪೃಥ್ವಿರಾಜ್ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರೇ ಅಪಮಾನ ಮಾಡಿರುವುದು ತೀರಾ ಖಂಡನೀಯ, ತಮ್ಮ ಮನುವಾದಿ ಮನಸ್ಥಿತಿಯಿಂದ ನ್ಯಾಯಾಧೀಶರು ಇನ್ನೂ ಹೊರ ಬಂದಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದರು. ಯುವ ಮುಖಂಡ ಡಿ.ವಿಜಯಕುಮಾರ್ ಅವರು ಮಾತನಾಡಿ, ದೇಶದ ಸಂವಿಧಾನ ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು, ನಿರ್ಲಕ್ಷಿಸಿದರೇ ಹೋರಾಟದ ಸ್ಚರೂಪ ಬದಲಾಗಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಲ್ಲಣ್ಣ, ಬಿ.ಕೃಷ್ಣಪ್ಪ, ಎ.ನಾಗಪ್ಪ, ಸಿ.ಪ್ರಹ್ಲಾದ್, ಎಸ್.ಪ್ರಸಾದ್, ಕೆ.ಎನ್.ವಿಜಯಕುಮಾರ್, ಕೆ.ವಿ.ಪ್ರಸಾದ್, ವೈ.ಟಿ.ಶಶಿಕುಮಾರ್, ಎಂ.ಜಿ.ರಮೇಶ್ ಬಾಬು, ಶ್ಯಾಂ ಸುಂದರ್, ಕೆ.ರಘುನಾಥ್ ಚಿದಾನಂದ್ ಸೇರಿದಂತೆ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!