ಹೊಸದಿಗಂತ ವರದಿ, ಮಡಿಕೇರಿ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವೀರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಅವಹೇಳನ ಮಾಡಿ ಅಶಾಂತಿ ಮೂಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿರುವ ಮಡಿಕೇರಿ ನಗರದ ನಿವಾಸಿ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಅವರ ವಿರುದ್ಧ ಬಿಜೆಪಿ ಪ್ರಮುಖರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು “ಕೋತಿಗಳು ಸಾರ್ ಕೋತಿಗಳು ಕಳ್ಳು ಕುಡಿದ ಕೋತಿಗಳು” ಎಂಬ ಹೆಸರಿನ ಪ್ರಚೋದನಾಕಾರಿ ಬರಹದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರನ್ನು ದಂಧೆಕೋರರು ಎಂದು ದೂಷಿಸಿ ಅವಹೇಳನ ಮಾಡಲಾಗಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆಯಿದೆ. ತೆನ್ನಿರ ಮೈನಾ ಅವರು ಬಹಳ ದಿನಗಳಿಂದ ಬಿಜೆಪಿ ಪಕ್ಷ, ಪಕ್ಷದ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದು ಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ಆಶಾಂತಿ ಉಂಟು ಮಾಡುವ ದೃಷ್ಟಿಯಿಂದ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಅವಮಾನ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ತೆನ್ನಿರ ಮೈನಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಎಂ.ಎಂ.ರವೀಂದ್ರ ಒತ್ತಾಯಿಸಿದ್ದಾರೆ.
ದೂರು ಸಲ್ಲಿಸುವ ಸಂದರ್ಭ ಎಂ.ಎಂ.ರವೀಂದ್ರ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಮತ್ತಿತರರು ಹಾಜರಿದ್ದರು