July 29, 2026
Wednesday, July 29, 2026
spot_img

ಒಳಮೀಸಲಾತಿ ಗೊಂದಲ ಸಚಿವ ಸಂಪುಟದಲ್ಲಿ ಚರ್ಚೆ ಆಗುತ್ತೆ: ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಮಕಾತಿಯಲ್ಲಿ ಒಳಮೀಸಲಾತಿ ವಿಚಾರವಾಗಿ ಉಂಟಾಗಿರುವ ಗೊಂದಲದ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೋಸ್ಟರ್ ವ್ಯವಸ್ಥೆ ಮಾಡುವಾಗ ಕೆಲವು ವರ್ಗಗಳಿಗೆ ಹೆಚ್ಚು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂಬ ಕಾರಣದಿಂದಲೇ ವಿವಾದ ಉಂಟಾಗಿದೆ ಎಂದು ಹೇಳಿದರು.

ಇದನ್ನೂ ಓದಿ:

ಎಸ್‌ಸಿ ಸಮುದಾಯಕ್ಕೆ 17 ಶೇಕಡಾ ಒಳಮೀಸಲಾತಿ ನೀಡುವ ಬಗ್ಗೆ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದ್ದರೂ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ 1 ಶೇಕಡಾ ಮೀಸಲಾತಿ ನೀಡಬೇಕೆಂಬ ಬೇಡಿಕೆಯೂ ಕೇಳಿಬರುತ್ತಿದೆ. ಇದೇ ವೇಳೆ 56 ಶೇಕಡಾ ಮೀಸಲಾತಿಗೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಈ ಎಲ್ಲ ವಿಷಯಗಳನ್ನು ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಇನ್ನೊಂದೆಡೆ ಫೋನ್ ಟ್ಯಾಪಿಂಗ್ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಸರ್ಕಾರ ಯಾರ ಫೋನನ್ನೂ ಟ್ಯಾಪ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರಾದರೂ ದಾಖಲೆಗಳಿದ್ದರೆ ಸಾರ್ವಜನಿಕವಾಗಿ ಹೊರತೆಗೆದು ತೋರಿಸಲಿ ಎಂದು ಅವರು ಸವಾಲು ಹಾಕಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !