ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಮತ್ತೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಮೇಕೆದಾಟು ಯೋಜನೆಗೆ ಒತ್ತಾಯಿಸುತ್ತಿದ್ದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಟಿವಿಕೆ ಸರ್ಕಾರ ಸೇರಿದಂತೆ ವಿವಿಧ ಪಕ್ಷಗಳು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಇದೀಗ ಕಾಂಗ್ರೆಸ್‌ನೊಳಗೇ ಈ ವಿಚಾರವಾಗಿ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಶೀಘ್ರವೇ ಅಗತ್ಯ ಅನುಮತಿಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದರು. ಅಲ್ಲದೆ, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಮೇಕೆದಾಟು ಯೋಜನೆಯನ್ನು ಕರ್ನಾಟಕದಲ್ಲಿ ನಿರ್ಮಿಸಬೇಕಿದ್ದು, ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಈ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಕಂ ಟ್ಯಾಗೋರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿವಕುಮಾರ್ ಅವರ ನಿಲುವು ತಮಿಳುನಾಡಿನ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿರುವ ಅವರು, ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಡೆಗಣಿಸುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ತಮಿಳುನಾಡಿನ ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು. ಯೋಜನೆಯಿಂದ ಕಾವೇರಿ ಡೆಲ್ಟಾ ಭಾಗದ ರೈತರ ಜೀವನೋಪಾಯಕ್ಕೆ ಧಕ್ಕೆಯಾಗಬಹುದು ಎಂದು ಟ್ಯಾಗೋರ್ ಎಚ್ಚರಿಸಿದ್ದಾರೆ. ಯೋಜನೆಯನ್ನು ವಿರೋಧಿಸಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ, ತಮಿಳುನಾಡಿನ ಟಿವಿಕೆ ಸರ್ಕಾರವೂ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು, ಪರಿಸರ ಮತ್ತು ಅರಣ್ಯ ಅನುಮತಿಗಳಿಲ್ಲದೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದೆ. ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.



