ಗಲಭೆ ನಿಯಂತ್ರಣಕ್ಕೆ ಖಡಕ್ ಕ್ರಮ: ಮಣಿಪುರದಲ್ಲಿ 5 ದಿನ ಇಂಟರ್ನೆಟ್ ಸಂಪೂರ್ಣ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಣಿಪುರ ಸರ್ಕಾರ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿದೆ.
ಬಿಷ್ಟುಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಘಟನೆಯೊಂದು ಕರೆ ನೀಡಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಇಲಾಖೆ ಆಯುಕ್ತ ಎಚ್. ಜ್ಞಾನ ಪ್ರಕಾಶ್, ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಇಂಟನರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಶನಿವಾರ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ವಾಹನವೊಂದನ್ನು ಸುಟ್ಟುಹಾಕಿದ್ದರು. ಘಟನೆಯ ವಿಡಿಯೊ ಮತ್ತು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ಕೆಲವರು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟ (ಎಟಿಎಸ್‌ಯುಎಂ) ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!