ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಪರಿಸ್ಥಿತಿ ಹದಗೆಡುತ್ತಿರುವುದರಿಂದ, ಇರಾನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತವು ಆಪರೇಷನ್ ಸಿಂಧುವನ್ನು ಪ್ರಾರಂಭಿಸಿದೆ.
ಸಚಿವ ಕೀರ್ತಿವರ್ಧನ್ ಸಿಂಗ್ ಮಾತನಾಡಿ, ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡಲಾಗುತ್ತಿದೆ. ಇರಾನ್ ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸಕಲ ವ್ಯವಸ್ಥೆ ಮಾಡಲಾಗಿದೆ. ಇದುವರೆಗೆ 350ಕ್ಕೂ ಹೆಚ್ಚು ಜನರಿಂದ ವಾಪಸಾತಿಗೆ ಸಂಬಂಧಿಸಿ ಮನವಿ ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇರಾನ್‌ನಿಂದ ಸ್ಥಳಾಂತರಿಸಲಾದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ಇಂದು ಬೆಳಗಿನ ಜಾವ ನವದೆಹಲಿಗೆ ಬಂದಿಳಿದಿದೆ. ವಿದ್ಯಾರ್ಥಿಗಳು ವಿಶೇಷ ವಿಮಾನದಲ್ಲಿ ಯೆರೆವಾನ್‌ನಿಂದ ಹೊರಟು ದೆಹಲಿಗೆ ಆಗಮಿಸಿದ್ದಾರೆ. ಸುಗಮ ಸ್ಥಳಾಂತರ ಪ್ರಕ್ರಿಯೆಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಕೇಂದ್ರ ಸರ್ಕಾರವು ಇರಾನ್ ಮತ್ತು ಅರ್ಮೇನಿಯಾ ಸರ್ಕಾರಗಳಿಗೆ ಕೃತಜ್ಞತೆ ಸಲ್ಲಿಸಿದೆ.
ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿಯ ಮೂಲಕ ಮತ್ತು ದೆಹಲಿಯಲ್ಲಿ ವಿದೇಶಾಂಗ ಸಚಿವಾಲಯ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.