ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆ, ಕುವೈತ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ ಭಾರತೀಯ ಉದ್ಯೋಗಿಯೊಬ್ಬರು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಕುವೈತ್‌ನ ಪವರ್ ಮತ್ತು ಜಲ ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಕಟ್ಟಡಕ್ಕೆ ಭಾರಿ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ದೃಢಪಡಿಸಿದ್ದಾರೆ.
ಅಧಿಕೃತ ಮಾಹಿತಿಯ ಪ್ರಕಾರ, ಭಾನುವಾರ ಸಂಜೆ ನಡೆದ ದಾಳಿಯಲ್ಲಿ ಪವರ್ ಪ್ಲಾಂಟ್‌ನ ಸರ್ವಿಸ್ ಬಿಲ್ಡಿಂಗ್ ಹಾಗೂ ಜಲ ಶುದ್ಧೀಕರಣ ಘಟಕ ಹಾನಿಗೊಳಗಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಭಾರತೀಯ ಸಿಬ್ಬಂದಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಳಿಕ ತುರ್ತು ತಾಂತ್ರಿಕ ತಂಡಗಳು, ಭದ್ರತಾ ಸಿಬ್ಬಂದಿ ಮತ್ತು ಪರಿಹಾರ ಪಡೆಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಆರಂಭಿಸಿವೆ.
ಇದನ್ನೂ ಓದಿ:
ಕುವೈತ್ ಸರ್ಕಾರ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದೆ. ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿಯನ್ನು ಪಡೆಯುವಂತೆ ಸೂಚಿಸಲಾಗಿದೆ. ವಿದ್ಯುತ್ ಮತ್ತು ನೀರು ಪೂರೈಕೆ ವ್ಯವಸ್ಥೆಯನ್ನು ಸ್ಥಿರವಾಗಿಡಲು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ ಕೆಲವು ವಾರಗಳಿಂದ ಕುವೈತ್ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ಹೆಚ್ಚಾಗಿದ್ದು, ಈ ಘಟನೆ ವಿದೇಶಿ ಉದ್ಯೋಗಿಗಳಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಗಳು ಕಂಡುಬರುತ್ತಿವೆ.



