ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆಯ ಮುಂದೆ ನಡೆದ ಅಹಿತಕರ ಘಟನೆಯು ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹಾಗೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆಯ ಬ್ಯಾನರ್ ಅಳವಡಿಸುವ ವಿಚಾರವನ್ನು ನೆಪವಾಗಿಟ್ಟುಕೊಂಡು ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಲಾಗಿದೆ ಎಂದು ವಿಜಯೇಂದ್ರ ದೂರಿದ್ದಾರೆ. “ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ನಗರದಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ,” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಮರಳಿದ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಲಗೊಳ್ಳುತ್ತಿದೆ. ಅದರಲ್ಲೂ ರೆಡ್ಡಿ ಮತ್ತು ಶ್ರೀರಾಮುಲು ಅವರ ಸ್ನೇಹ ಮತ್ತೆ ಚಿಗುರಿರುವುದು ರಾಜಕೀಯ ವಿರೋಧಿಗಳಿಗೆ ನುಂಗಲಾರದ ತುತ್ತಾಗಿದೆ. ಈ ಅಸೂಯೆಯೇ ಇಂದಿನ ದಾಳಿಗೆ ಕಾರಣ ಎಂದು ವಿಜಯೇಂದ್ರ ವಿಶ್ಲೇಷಿಸಿದ್ದಾರೆ.
“ಬಳ್ಳಾರಿಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಂತೆ ವರ್ತಿಸುತ್ತಿವೆ. ಪೊಲೀಸರು ಸರ್ಕಾರದ ಕೈಗೊಂಬೆಯಾಗಿದ್ದಾರೆ,” ಎಂದು ಆರೋಪಿಸಿರುವ ಅವರು, ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರೆ ಈ ದಾಳಿಯನ್ನು ತಡೆಯಬಹುದಿತ್ತು ಎಂದಿದ್ದಾರೆ.

