ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಇಂದು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಐದು ವರ್ಷಗಳ ಅಧಿಕಾರಾವಧಿಯ ಕುರಿತು ಮಾತನಾಡಿದ ಅವರು, “ನಮ್ಮ ಸರ್ಕಾರ ಐದು ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ಆದರೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಸದಾ ಬದ್ಧ,” ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟ ಪುನರಚನೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಸದ್ಯಕ್ಕೆ ನಾನು ಯಾವುದೇ ಸಮಯ ಕೇಳಿಲ್ಲ. ಒಂದು ವೇಳೆ ಎಐಸಿಸಿ ನಾಯಕತ್ವ ಅಥವಾ ರಾಹುಲ್ ಗಾಂಧಿಯವರು ಕರೆದರೆ, ದೆಹಲಿಗೆ ಭೇಟಿ ನೀಡಿ ಸಂಪುಟ ಬದಲಾವಣೆ ಹಾಗೂ ರಾಜ್ಯದ ಇತರೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಾಗುವುದು,” ಎಂದರು.
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ತಕ್ಷಣವೇ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಸಿದ್ದರಾಮಯ್ಯ ಘೋಷಿಸಿದರು. “ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆಡಳಿತದ ಪರವಾಗಿ ಜನರ ಒಲವು ಇರುವುದರಿಂದ, ನಾವು ಚುನಾವಣೆಯನ್ನು ಎದುರಿಸಲು ಸಂಪೂರ್ಣ ಸಿದ್ಧರಿದ್ದೇವೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.



