ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು , ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
ಈ ಹಿನ್ನೆಲೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ‘ಕಳೆದ ಕೆಲವು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳಲ್ಲಿ ವಿದೇಶಿ ಶಕ್ತಿಗಳು ವಿಶೇಷವಾಗಿ ಪಾಕಿಸ್ತಾನದ ಕೈವಾಡ ಇರಬಹುದೆ?’ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ, ಈ ಕೋನದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಪ್ರತಿಬಿಂಬಿಸಲು ಪಾಕಿಸ್ತಾನದ ರಾಜತಾಂತ್ರಿಕರೊಬ್ಬರು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ನಿರಂತರವಾಗಿ ಫೋಟೊ ಹಂಚಿಕೊಳ್ಳುತ್ತಿದ್ದಾರೆ. ಇದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ಹೇಳಿದೆ.
ಸರ್ಕಾರದ ಕಾರ್ಯ ತಂತ್ರವೇನು?
ಢಾಕಾದಲ್ಲಿನ ಅಧಿಕಾರ ಹಸ್ತಾಂತರದ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸುವಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಅಲ್ಪಾವಧಿ ಮತ್ತು ದೀರ್ಘಕಾಲೀನ ಕಾರ್ಯತಂತ್ರವೇನು ? ಎಂದೂ ರಾಹುಲ್ ಗಾಂಧಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಜೈಶಂಕರ್, ‘ಸದ್ಯ ಬಾಂಗ್ಲಾದೇಶದಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದ್ದು, ಈಗಲೇ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಅಲ್ಲಿನ ಬೆಳವಣಿಗೆಯನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ಮುಂದಿನ ನಡೆ ತೀರ್ಮಾನಿಸಲಾಗುವುದು’ʼ ಎಂದು ತಿಳಿಸಿದರು.
ಬಾಂಗ್ಲಾದೇಶದಲ್ಲಿ ನಡೆದ ನಾಟಕೀಯ ತಿರುವನ್ನು ಮೊದಲೇ ಊಹಿಸಲಾಗಿತ್ತೆ ? ಎಂಬ ರಾಹುಲ್ ಗಾಂಧಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್,’ಭಾರತವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿತ್ತುʼ’ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ನಾಯಕರು ನೆರೆ ದೇಶದ ಈ ಬಿಕ್ಕಟ್ಟನ್ನು ನಿಭಾಯಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಲಿದೆ ಎಂದು ಭರವಸೆ ನೀಡಿದರು.