ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಸಿಗೆಯಲ್ಲಿ ವಿದ್ಯುತ್ ಬಳಕೆ 19,000 ದಿಂದ 19,500 ಮೆ.ವ್ಯಾಟ್‌ಗೆ ಹೆಚ್ಚಳ ಆಗೋ ಸಾಧ್ಯತೆ ಇದ್ದರೂ, ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ವಿದ್ಯುತ್ ಪೂರೈಕೆ ಸಂಬಂಧ ಎಸ್ಕಾಂಗಳ ಮುಖ್ಯಸ್ಥರು ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರೆ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸಲಾಗುವುದು ಎಂದರು.
ಮುಂದಿನ ಮೂರು ತಿಂಗಳಲ್ಲಿ ವಿದ್ಯುತ್ ಗೆ ಅತಿ ಹೆಚ್ಚು ಬೇಡಿಕೆ ಬರಲಿದೆ. ಇದನ್ನು ಸರಿದೂಗಿಸಲು 1 ಸಾವಿರ ಮೆ.ವ್ಯಾ ವಿದ್ಯುತ್ ಖರೀದಿಗೆ ನಿರ್ಧಾರ ಮಾಡಲಾಗಿದೆ. ಉತ್ತರಪ್ರದೇಶ ಹಾಗೂ ಪಂಜಾಬ್ ನಿಂದ ವಿದ್ಯುತ್ ಸಾಲ (ಬ್ಯಾಂಕಿಂಗ್) ಪಡೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಪಾವಗಡದಲ್ಲಿ 1000 ಮೆ.ವ್ಯಾ. ಸಾಮರ್ಥ್ಯದ ಬ್ಯಾಟರಿ ಸ್ಟೋರೇಜ್ ಯೋಜನೆ ಮಾಡಲಾಗುವುದು. ಇದರಿಂದ ರಾಜ್ಯದಲ್ಲಿ ಹೆಚ್ಚು ವಿದ್ಯುತ್ ಸಂಗ್ರಹಣೆಗೆ ಅವಕಾಶ ಸಿಗಲಿದೆ ಎಂದರು.