ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳಿಗೆ ಅರ್ಹ ವ್ಯಕ್ತಿಗಳನ್ನು ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವ ಬದಲು ಅವರ ಸಾಧನೆಗಳ ಆಧಾರದ ಮೇಲೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿತರಣೆ ಮಾಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಕನ್ನಡ ಮತ್ತು ಸಂಸ್ಕೃತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ ಮಾತನಾಡಿ, ಪ್ರಶಸ್ತಿಗಳು ಕೇಳಿ ಪಡೆಯುವಂತೆ ಆಗಬಾರದು. ಅರ್ಹರನ್ನು ಗುರುತಿಸಿ, ಅವರ ಮನೆ ಬಾಗಿಲಿಗೆ ಪ್ರಶಸ್ತಿ ನೀಡಿ ಗೌರವಿಸುವಂತೆ ಆಗಬೇಕು. ಇದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೂ ಚರ್ಚೆ ನಡೆಸುತ್ತೇನೆಂದು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗುತ್ತಿತ್ತು. ನಾನು ಜಿಲ್ಲಾ ಪ್ರವಾಸಕ್ಕೆ ಹೋದರೆ ಅರ್ಜಿ ಹಾಗೂ ದಾಖಲೆಗಳನ್ನು ಇಟ್ಟುಕೊಳ್ಳಲು ಜೊತೆಯಲ್ಲಿ ಹೆಚ್ಚುವರಿ ಕಾರನ್ನು ತೆಗೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಕಳೆದ ಬಾರಿ ಅರ್ಜಿ ಹಾಕದ ಅಂದಾಜು 25ಕ್ಕೂ ಹೆಚ್ಚು ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದಿದ್ದಾರೆ.