ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ. ಇತ್ತೀಚೆಗೆ ಗಾಜಾ ಪಟ್ಟಿಯಲ್ಲಿ ನಿರಾಶ್ರಿತರ ಶಿಬಿರದ ಮೇಲೆ ನಡೆದ ಇಸ್ರೇಲ್ನ ವೈಮಾನಿಕ ದಾಳಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್-ಬಾಲಾಹ್ನಲ್ಲಿರುವ ಅಲ್-ಅಕ್ಸಾ ಮಾರ್ಟಿಯರ್ಸ್ ಆಸ್ಟತ್ರೆಗೆ ಸಾಗಿಸಲಾಗಿದೆ. ಈ ವೈಮಾನಿಕ ದಾಳಿಯಿಂದಾಗಿ ಹಲವು ಮನೆಗಳು ನೆಲಕ್ಕುರುಳಿವೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಅಂದು ಮಾಹಿತಿ ನೀಡಿದ್ದರು. ಇದೀಗ ಸಾವನ್ನಪ್ಪಿರುವವರ ಸಂಖ್ಯೆ 50 ಎಂದು ವರದಿಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗಬಹುದು ಎಂದು ಗಾಜಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ, 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್ ಅನ್ನು ನಾಶ ಮಾಡುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.