ಹೊಸದಿಗಂತ ವರದಿ,ಮಂಗಳೂರು:
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ಅಪಸ್ವರ ಇದ್ದರೂ, ಅಂತಿಮವಾಗಿ ಎಲ್ಲವೂ ಸುಸೂತ್ರವಾಗಿ ನೆರವೇರುತ್ತದೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಅಧಿಕಾರ ಇರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ. ಹಾಗಾಗಿ ಈ ಬಗ್ಗೆ ಅವರೇ ನಿರ್ಧಾರ ಕೈಗೊಳ್ಳುತ್ತಾರೆ. ಮುಖ್ಯಮಂತ್ರಿ ಅವರು ತೆಗೆದುಕೊಳ್ಳುವ ನಿರ್ಣಯಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲು ಮತ್ತು ಕೇಂದ್ರ ನಾಯಕರ ತಂಡ ಅಂತಿಮ ರೂಪ ನೀಡುತ್ತದೆ ಎಂದರು.
ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿರುವ ಕುರಿತು ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದವರು ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದು ಸಹಜ ಎಂದರು.