ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದಲ್ಲಿ ಗೆದ್ದು ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಇಲ್ಲಿ ಕಾಂಗ್ರೆಸ್ನ ಇಕ್ಬಾಲ್ ಹುಸೇನ್ ಗೆದ್ದು ಬೀಗಿದ್ದಾರೆ.
ಈ ಮೂಲಕ ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ, ಜೆಡಿಎಸ್ನ ಭದ್ರಕೋಟೆಯಲ್ಲೇ ನಿಖಿಲ್ ಸೋಲು ಕಂಡಿದ್ದಾರೆ.
ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಭಾವುಕ ಪೋಸ್ಟ್ ಶೇರ್ ಮಾಡಿದ್ದಾರೆ. ಬೆಂಬಲಿಸಿ ಆಶೀರ್ವದಿಸಿದ ರಾಮನಗರ ಮಹಾಜನತೆಗೆ ಶಿರಸಾಷ್ಟಾಂಗ ನಮನಗಳು ಎಂದು ಹೇಳಿದ್ದಾರೆ.
ಫೇಸ್ಬುಕ್ನಲ್ಲಿ ನಿಖಿಲ್ ದೀರ್ಘ ಪೋಸ್ಟ್ ಶೇರ್ ಮಾಡಿದ್ದಾರೆ.
‘ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ’ ಎಂದಿದ್ದಾರೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನು ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು’ ಎಂದು ಹೇಳಿದ್ದಾರೆ.