ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೇಯಸ್ ಅಯ್ಯರ್ ಹಾಗೂ ಕೆ ಎಲ್ ರಾಹುಲ್ ಬಾರಿಸಿದ ಸ್ಪೋಟಕ ಶತಕ ಹಾಗೂ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಬಾರಿಸಿದ ಭರ್ಜರಿ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 410 ರನ್ ಬಾರಿಸಿದ್ದು, ಗೆಲ್ಲಲು ನೆದರ್‌ಲೆಂಡ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ
ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು.
ಶುಭ್‌ಮನ್ ಗಿಲ್ ಕೇವಲ 32 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ 54 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 61 ರನ್ ಬಾರಿಸಿ ಬಾಸ್ ಡೇ ಲೀಡೆಗೆ ವಿಕೆಟ್ ಒಪ್ಪಿಸಿದರು.ಕೇವಲ 29 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡ ಭಾರತ ತಂಡಕ್ಕೆ ಮೂರನೇ ವಿಕೆಟ್‌ಗೆ ಜವಾಬ್ದಾರಿಯುತ ಆಟವಾಡಿದರು. ಅಂತಿಮವಾಗಿ ವಿರಾಟ್ ಕೊಹ್ಲಿ 51 ರನ್ ಬಾರಿಸಿ ವ್ಯಾನ್ ಡರ್ ಮರ್ವೆಗೆ ವಿಕೆಟ್ ಒಪ್ಪಿಸಿದರು.
ಒಂದು ಕಡೆ ವಿರಾಟ್ ಕೊಹ್ಲಿ ಚುರುಕಾಗಿ ರನ್ ಗಳಿಸುತ್ತಿದ್ದಾಗ ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಶ್ರೇಯಸ್ ಅಯ್ಯರ್, ಕೊಹ್ಲಿ ವಿಕೆಟ್ ಪತನದ ಬಳಿಕ ಆಕ್ರಮಣಕಾರಿ ಆಟವಾಡಲಾರಂಭಿಸಿದರು. ಶ್ರೇಯಸ್ ಅಯ್ಯರ್ ಕೇವಲ 48 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಇದಾದ ಬಳಿಕವೂ ಬ್ಯಾಟಿಂಗ್ ಅಬ್ಬರ ಮುಂದುವರೆಸಿದ ಶ್ರೇಯಸ್ ಕೇವಲ 84 ಎಸೆತಗಳನ್ನು ಎದುರಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಹಾಗೂ ಒಟ್ಟಾರೆ 4ನೇ ಏಕದಿನ ವಿಶ್ವಕಪ್ ಸಿಡಿಸಿ ಮಿಂಚಿದರು.
ಇನ್ನು ಕೊಹ್ಲಿ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಲೋಕಲ್ ಬಾಯ್ ಕೆ ಎಲ್ ರಾಹುಲ್, ನೆದರ್‌ಲೆಂಡ್ಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ದ್ವಿಶತಕದ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ನಾನೂರರ ಗಡಿ ದಾಟಿಸಿದರು. ರಾಹುಲ್ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿವೇಗದ ಶತಕ ಸಿಡಿಸಿ ಮಿಂಚಿದರು. ಅಂತಿಮವಾಗಿ ರಾಹುಲ್ 64 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.