ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಯದ ಕಾರಣದಿಂದ ಸುಮಾರು ಎರಡು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಗಾಯಗೊಂಡಿದ್ದ ಅಯ್ಯರ್, ಅಕ್ಟೋಬರ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ (COE) ಮೈದಾನದಲ್ಲಿ ನೆಟ್ಸ್‌ನಲ್ಲಿ ಬೆವರಿಳಿಸುತ್ತಿದ್ದಾರೆ.
ಇದನ್ನೂ ಓದಿ:
ಸುಮಾರು 60 ದಿನಗಳ ಬಳಿಕ ಬ್ಯಾಟ್ ಹಿಡಿದಿರುವ ಶ್ರೇಯಸ್ ಅಯ್ಯರ್, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ರಾಷ್ಟ್ರೀಯ ತಂಡಕ್ಕೆ ಮರಳುವ ಮೊದಲು ಅವರನ್ನು ವಿಜಯ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿಸುವ ಯೋಚನೆಯೂ ನಡೆಯುತ್ತಿದೆ ಎನ್ನಲಾಗಿದೆ.
ಇದೇ ಹಿನ್ನೆಲೆಯಲ್ಲಿ ಅವರು ಫಿಟ್‌ನೆಸ್ ಮತ್ತು ಬ್ಯಾಟಿಂಗ್ ಅಭ್ಯಾಸಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅಯ್ಯರ್‌ಗೆ ಅಸಲಿಗೆ ಏನಾಗಿತ್ತು ಎಂದರೆ, ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಂಭೀರ ಗಾಯವಾಗಿತ್ತು. ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಡೈವಿಂಗ್ ಕ್ಯಾಚ್ ಹಿಡಿಯುವ ಪ್ರಯತ್ನದಲ್ಲಿ ಅವರ ಎಡ ಭಾಗದ ಪಕ್ಕೆಲುಬಿನ ಒಳಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ನಂತರದ ವೈದ್ಯಕೀಯ ಪರೀಕ್ಷೆಯಲ್ಲಿ ಗುಲ್ಮ ಭಾಗದಲ್ಲಿ ಒಳಗಿನ ರಕ್ತಸ್ರಾವ ಪತ್ತೆಯಾಗಿ, ವಿಶೇಷ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈಗ ಚೇತರಿಸಿಕೊಂಡಿರುವ ಅಯ್ಯರ್ ಕಮ್‌ಬ್ಯಾಕ್‌ಗಾಗಿ ಕ್ರಿಕೆಟ್ ಅಭಿಮಾನಿಗಳು ನಿರೀಕ್ಷೆಯಲ್ಲಿದ್ದಾರೆ.

