ಕೆಪಿಎಸ್ಸಿ ಪರೀಕ್ಷೆ- ಅಕ್ರಮ ತಡೆಯಲು ಜಾಮರ್ ಹಾಗೂ ಸಿಸಿಟಿವಿ ಅಳವಡಿಕೆ: ಜಿಲ್ಲಾಧಿಕಾರಿ ದಿವ್ಯಪ್ರಭು

ಹೊಸದಿಗಂತ ವರದಿ ಚಿತ್ರದುರ್ಗ:

ನವೆಂಬರ್ 4 ಮತ್ತು 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ. (ಕರ್ನಾಟಕ ಲೋಕಸೇವಾ ಆಯೋಗ) ದವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಮೊಬೈಲ್, ಬ್ಲೂಟೂತ್ ಇತರೆ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಮೊಬೈಲ್ ಜಾಮರ್ ಹಾಗೂ ಸಿ.ಸಿ.ಟಿ.ವಿ. ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಗುರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರೂಪ್-ಸಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನ.04 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ. ನ.05 ರಂದು ಬೆಳಿಗ್ಗೆ 10 ರಿಂದ 11:30ರ ವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ, ಹಾಗೂ ಇದೇ ದಿನ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಗಟ್ಟಲು ಕೆಪಿಎಸ್‌ಸಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಕೊಠಡಿಗಳಲ್ಲಿ ಪ್ರತಿಯೊಬ್ಬರ ಮೇಲೆ ನಿಗಾ ವಹಿಸಲು ಕೊಠಡಿ ಮೇಲ್ವಿಚಾರಕರಿಗೆ ಬಾಡಿ ಕ್ಯಾಮರಾ ಧರಿಸುವ ವ್ಯವಸ್ಥೆ ಮಾಡಿದೆ. ಪರಿಕ್ಷಾ ಕೇಂದ್ರ ಮೇಲ್ವಿಚಾರಕರು ಜಾಮರ್, ಸಿಸಿಟಿವಿ ಹಾಗೂ ಕ್ಯಾಮರಾಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೆಪಿಎಸ್‌ಸಿ ಅಧಿಕಾರಿಗಳಿಗೆ ತಿಳಿಸಬೇಕು. ಯಾವುದೇ ಅಕ್ರಮಗಳು ಜರುಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಕಾಲೇಜು ಕೇಂದ್ರಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯಲಿದೆ. ಒಟ್ಟು 1828 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಕಲಂ. 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ತೆರದು ಆರೋಗ್ಯ ಸಹಾಯಕರನ್ನು ನೇಮಿಸಬೇಕು. ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಜಿಲ್ಲಾ ಖಜಾನಾಧಿಕಾರಿ ರಮೇಶ್ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!