ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ 24 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಸಂಜೆ 5 ಗಂಟೆ ವೇಳೆಗೆ ಶೇ 58.19ಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ 77.23ರಷ್ಟು ಮತದಾನವಾಗಿದ್ದರೆ, ಪುಲ್ವಾಮಾ ಜಿಲ್ಲೆಯಲ್ಲಿ ಅತಿ ಕಡಿಮೆ ಶೇ 43.87ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.
ದೋಡಾ ಜಿಲ್ಲೆಯಲ್ಲಿ ಶೇ 69.33ರಷ್ಟು, ರಾಂಬನ್ ಜಿಲ್ಲೆಯಲ್ಲಿ ಶೇ 67.71ರಷ್ಟು, ಕುಲ್ಗಾಮ್ ಜಿಲ್ಲೆಯಲ್ಲಿ ಶೇ 59.62ರಷ್ಟು, ಶೋಪಿಯಾನ್ ಜಿಲ್ಲೆಯಲ್ಲಿ ಶೇ 53.64ರಷ್ಟು ಅನಂತನಾಗ್ ಜಿಲ್ಲೆಯಲ್ಲಿ ಶೇ 54.17ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕಿಶ್ತ್ವಾರ್ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿ ಗೊಂದಲ ಉಂಟಾದ ಪರಿಣಾಮ ಮತದಾನವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಉಳಿದಂತೆ ಎಲ್ಲೆಡೆ ಶಾಂತಿಯುತ ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.