ಹೊಸದಿಗಂತ ವರದಿ,ಮಂಗಳೂರು:
ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬುಧವಾರ ಮಂಗಳೂರಿನಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡರು. ಪ್ರತಿಭಟನೆ ವೇಳೆ ರಸ್ತೆಯಲ್ಲಿಯೇ ಕುಳಿತು ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ದುರಾಡಳಿತವನ್ನು ಖಂಡಿಸಿದರು.
ಅಂಬೇಡ್ಕರ್ ವೃತ್ತದಿಂದ ಕ್ಲಾಕ್‌ಟವರ್‌ವರೆಗೆ ನಡೆದ ಬೃಹತ್ ಯಾತ್ರೆಯಲ್ಲಿ ಬಿಜೆಪಿ ರಾಜ್ಯ ನಾಯಕರು, ಜಿಲ್ಲಾ ನಾಯಕರು ಶಾಸಕರು, ಸಂಸದರು ಪಾಲ್ಗೊಂಡರು.
83ರ ಹರೆಯದ ಬಿಜೆಪಿ ಕಾರ್ಯಕರ್ತೆ ವತ್ಸಲಾ ಕಾಮತ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಿದರು.
ಬಳಿಕ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಂಘರ್ಷದ ಹಾದಿ ಹಿಡಿದಿದೆ. ಹಿಂದುಗಳಿಗೆ ನಿರಂತರವಾಗಿ ಅಪಮಾನ ಮಾಡುತ್ತಲೇ ಬಂದಿರುವ ಈ ಸರ್ಕಾರ ಬಡವರ ಹಣವನ್ನು ಲೂಟಿ ಮಾಡುವುದರೊಂದಿಗೆ ರಾಜ್ಯವನ್ನು ಅದಃಪತನಕ್ಕೆ ತಳ್ಳುತ್ತಿದೆ. ಅಲ್ಪಸಂಖ್ಯಾತರ ಓಲೈಕೆಗೆ ಆದ್ಯತೆ ನೀಡುವ ಲಜ್ಜೆಗೆಟ್ಟ ಸರ್ಕಾರ ರಾಜ್ಯದಲ್ಲಿದೆ. ಈ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರವೀಣ್ ನೆಟ್ಟಾರ್‌ನ್ನು ಕೊಲೆಗೈದಾತ ಕೋರ್ಟ್‌ಗೆ ಹಾಜಾರಾಗುವ ವೇಳೆ ದೇಶದ್ರೋಹಿಯೋರ್ವ ಮುತ್ತಿಕ್ಕುತ್ತಾನೆ, ಎಂದರೆ ಕಾಂಗ್ರೆಸ್ ಅವಧಿಯಲ್ಲಿ ಎಂತಹ ಸ್ಥಿತಿಗೆ ನಾವು ತಲುಪಿದ್ದೇವೆ ಎಂಬುದು ವೇದ್ಯವಾಗುತ್ತದೆ. ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿರುತ್ತಿದ್ದರೆ ದೇಶದ್ರೋಹಿಗಳಿಗೆ ತಕ್ಕಶಾಸ್ತಿಯಾಗುತ್ತಿತ್ತು ಎಂದವರು ಹೇಳಿದರು.
ಬಿ.ಎಸ್.ವೈ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಅಭಿವೃದ್ಧಿಯಲ್ಲಿ ದೇಶದಲ್ಲಿಯೇ ನಂಬರ್ ವನ್ ರಾಜ್ಯವಾಗಿ ಗುರುತಿಸಿಕೊಂಡಿತ್ತು. ಆದರೆ ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಭ್ರಷ್ಟಾಚಾರದಲ್ಲಿ ನಂಬರ್ ವನ್ ಆಗಿ ಗುರುತಿಸಿಕೊಂಡಿದೆ. ಇದನ್ನು ಸ್ವತಃ ಕಾಂಗ್ರೆಸ್ ನಾಯಕರೇ ಹೇಳಿಕೊಳ್ಳುತ್ತಿದ್ದಾರೆ. ಅಂತಹ ದುರವಸ್ಥೆಗೆ ಕಾಂಗ್ರೆಸ್ ತಲುಪಿದೆ ಎಂದರು.
ರಾಜ್ಯದಲ್ಲಿರುವುದು ಜನತೆಯ ಸಿಎಂ ಅಲ್ಲ, ಬದಲಾಗಿ ಕಾಂಗ್ರೆಸ್ ಸಿಎಂ ಆಗಿ ಸಿದ್ದರಾಮಯ್ಯನವರು ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎಸ್‌ವೈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯದಿಂದ 19,500 ಕೋಟಿ ಅನುದಾನ ಬಿಡುಗಡೆಯಾಗಿದೆ. ಸಿದ್ದರಾಮಯ್ಯವರ ಅವಧಿಯಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ ಎಂಬುದನ್ನು ಹೇಳಲಿ ಎಂದು ವಿಜಯೇಂದ್ರ ಸವಾಲು ಹಾಕಿದರು.
ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ , ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಸುನಿಲ್ ಕುಮಾರ್ , ವಿಧಾನಪರಿಷತ್ ಮುಖ್ಯಸಚೇತಕ ರವಿಕುಮಾರ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಕ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಸಿಮೆಂಟ್ ಮಂಜು, ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್.ಅಂಗಾರ, ಮಾಜಿ ಶಾಸಕ ಸಂಜೀವ ಮಟಂದೂರು, ಬಿಜೆಪಿ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಮೋನಪ್ಪ ಭಂಡಾರಿ, ಯೋಗೀಶ್ ಭಟ್, ಮುನಿಸ್ವಾಮಿ, ಪ್ರಮುಖರಾದ ಆಶಾ ತಿಮ್ಮಪ್ಪ, ಪ್ರೇಮಾನಂದ ಶೆಟ್ಟಿ, ರಾಜೇಶ್ ಕಾವೇರಿ, ದಿವಾಕರ್, ಪ್ರೀತಂಗೌಡ, ಶರಣ್, ತಮ್ಮೇಶ್ ಗೌಡ, ಪ್ರಶಾಂತ್ ಕರಿಂಜ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ದ.ಕಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ತಿಲಕ್‌ರಾಜ್ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು.