August 26, 2026
Wednesday, August 26, 2026
spot_img

ಜಂತರ್ ಮಂತರ್ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಸುಪ್ರೀಂ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಂತರ್ ಮಂತರ್ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಚಳುವಳಿಗಳ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಮುಖ ಮಧ್ಯಂತರ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್‌ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ.

ಅಪ್ರಾಪ್ತರ ಬಿಡುಗಡೆ ಹಾಗೂ ಕಠಿಣ ಕ್ರಮಕ್ಕೆ ತಡೆ

ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ಸಾಮಾನ್ಯ ಪ್ರತಿಭಟನಾಕಾರರ ವಿರುದ್ಧ ಬಲವಂತದ ಅಥವಾ ಕಠಿಣ ಕಾನೂನು ಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಜೊತೆಗೆ, ವಿವಿಧ ರಾಜ್ಯಗಳಲ್ಲಿ ಬಂಧನದಲ್ಲಿರುವ 18 ವರ್ಷದೊಳಗಿನ ಅಪ್ರಾಪ್ತ ವಿದ್ಯಾರ್ಥಿಗಳನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಪೊಲೀಸ್ ಸಿಬ್ಬಂದಿ ರಕ್ಷಣೆ ಮತ್ತು ನ್ಯಾಯಯುತ ತನಿಖೆ

ಯಾರೇ ಆಗಲಿ ಕಾನೂನನ್ನು ಕೈಗೆ ತೆಗೆದುಕೊಂಡರೆ ತಕ್ಕ ಪರಿಣಾಮ ಎದುರಿಸಲೇಬೇಕು ಎಂದು ನ್ಯಾಯಪೀಠ ಎಚ್ಚರಿಸಿದೆ. ಪ್ರತಿಭಟನೆ ವೇಳೆ ಗಾಯಗೊಂಡಿರುವ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಕುಟುಂಬಗಳ ಕಳವಳವನ್ನು ನಿವಾರಿಸಲು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಖಾಸಗಿತನಕ್ಕೆ ಆದ್ಯತೆ: ಡಿಜಿಟಲ್ ಡೇಟಾ ಸುರಕ್ಷತೆ

ಪ್ರತಿಭಟನಾಕಾರರ ವೈಯಕ್ತಿಕ ಮಾಹಿತಿ ಹಾಗೂ ಡಿಜಿಟಲ್ ಡೇಟಾವನ್ನು ಪೊಲೀಸರು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಎಂದು ಪೀಠವು ಸ್ಪಷ್ಟವಾಗಿ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !