ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ವಾರದೊಳಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಪ್ರಕ್ರಿಯೆ ಪೂರ್ಣವಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಹೇಳಿದರು.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲಾ ಅಂತಿಮ ಆಗುತ್ತದೆ ಎಂದರು.
ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್ ಪಕ್ಷಕ್ಕೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕಾ ಬೇಡವಾ ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದರು.
ಬಿಜೆಪಿ ಟಿಕೆಟ್ ವಿಚಾರವಾಗಿ ಕೆಲವು ಕ್ಷೇತ್ರಗಳ ಅಭಿಪ್ರಾಯ ಕೇಳಬಹುದು. ಆಗ ಅಭಿಪ್ರಾಯವನ್ನು ಹೇಳುತ್ತೇವೆ. ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು.
ಮಂಡ್ಯ ಲೋಕಸಭೆ ಕ್ಷೇತ್ರದ ಅನಗತ್ಯವಾಗಿ ಚರ್ಚೆ ಆಗುತ್ತಿದೆ . ಆ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ಸಂಘಟನೆ ಚೆನ್ನಾಗಿದೆ. ಆದಷ್ಟು ಬೇಗ ಮಂಡ್ಯದಲ್ಲಿ ಸಮಾವೇಶ ನಡೆಸಲಾಗುವುದು. ನನಗೆ ವಯಸ್ಸಾಗಿದ್ದರೂ ನಾನೇನು ಸುಮ್ಮನೆ ಕೂರಲ್ಲ ಎಂದರು.