ಹೊಸದಿಗಂತ ವರದಿ ಬೆಳಗಾವಿ:
ಹಾಲು, ಮೊಸರು ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳವನ್ನು ತಕ್ಷಣ ಹಿಂಪಡೆಯಬೇಕು. ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಕೂಡಲೇ ಪರಿಹಾರ ಒದಗಿಸುವುದರ ಜತೆಗೆ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಿದ, ಬಳಿಕ ಚನ್ನಮ್ಮ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪ್ರತಿಭಟನಾ ರ‍್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಂಕರ ಮಾಡಲಗಿ, ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಸೇರಿದಂತೆ ವಿವಿಧ ಹಾಲಿನ ಉತ್ಪನ್ನಗಳ ಬೆಲೆಯನ್ನು 8ರಿಂದ 35 ರೂ.ವರೆಗೆ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹೊರೆಯಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದು, ಹಾಲಿನ ಉತ್ಪನ್ನಗಳ ದರ ಹೆಚ್ಚಳದಿಂದ ಹೋಟೆಲ್‌ಗಳು ಹಾಗೂ ಖಾನಾವಳಿಗಳಲ್ಲಿಯೂ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಎಸ್‌ಆರ್‌ಟಿಸಿ ಸೇರಿದಂತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.23ರಿಂದ 30ರಷ್ಟು ಹೆಚ್ಚಿಸಿರುವುದರಿಂದ ಕಾರ್ಮಿಕರು, ವಿದ್ಯಾರ್ಥಿಗಳು, ನೌಕರರು ಹಾಗೂ ಹಿರಿಯ ನಾಗರಿಕರಿಗೆ ತೀವ್ರ ಆರ್ಥಿಕ ಹೊರೆ ಉಂಟಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹಿಂಗಾರು ಬೆಳೆಗಳು ಹಾನಿಗೀಡಾಗಿರುವುದರಿಂದ ರೈತರಿಗೆ ತಕ್ಷಣ ಬರ ಪರಿಹಾರ ನೀಡಬೇಕು. ಬರಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಕ್ಕಿ, ಸಕ್ಕರೆ, ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ಮುಂದಾಗಬೇಕು. ಕಬ್ಬಿನ ಬೆಲೆ ನಿಗದಿಯಲ್ಲಿನ ವಿಳಂಬ ನಿವಾರಿಸಿ ರೈತರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕು. ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಜೆಡಿಎಸ್ ವತಿಯಿಂದ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ನಗರಾಧ್ಯಕ್ಷ ವಿಠ್ಠಲ್ ಗಡ್ಡಿ, ಬಿ.ಎಸ್. ರುದ್ರಗೌಡ, ವಿ.ಬಿ. ರೇವಡಿ, ಎಂ.ವೈ. ಸೋಮನ್ನವರ್, ರಾಮು ರಜಪೂತ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.



