ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಭಾಗದ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ಜೆಡಿಎಸ್ ಪಾಳಯದಲ್ಲಿ ‘ಕ್ಷಿಪ್ರ ಕ್ರಾಂತಿ’ಯ ಮುನ್ಸೂಚನೆ ಸಿಕ್ಕಿದೆ. ಹಾಲಿ ಶಾಸಕ ಜಿ.ಟಿ. ದೇವೇಗೌಡರು ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ಕಣಕ್ಕಿಳಿಸಲು ಸಿದ್ಧತೆಗಳು ನಡೆಯುತ್ತಿವೆ.
ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಾ.ರಾ. ಮಹೇಶ್, ತಾವು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ಕ್ಷೇತ್ರದಲ್ಲಿ ಹಾಲಿ ಶಾಸಕರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿಲ್ಲದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ಸಾ.ರಾ. ಮಹೇಶ್ ಅವರೇ ಸೂಕ್ತ ಅಭ್ಯರ್ಥಿ ಎಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.
“ನಾನು ಕೆ.ಆರ್. ನಗರದಲ್ಲಿ ಮೂರು ಬಾರಿ ಗೆದ್ದಿದ್ದೇನೆ. ಆದರೆ ಪಕ್ಷ ಎಲ್ಲಿ ಸ್ಪರ್ಧಿಸು ಎನ್ನುತ್ತದೆಯೋ ಅಲ್ಲಿಗೆ ಸಿದ್ಧನಿದ್ದೇನೆ. ಅಭ್ಯರ್ಥಿಯ ಆಯ್ಕೆಯನ್ನು ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವೇಗೌಡರು ನಿರ್ಧರಿಸುತ್ತಾರೆ” ಎಂದು ಸಾ.ರಾ. ಮಹೇಶ್ ಸ್ಪಷ್ಟಪಡಿಸಿದ್ದಾರೆ.
ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಈ ರೀತಿಯ ತಂತ್ರಗಾರಿಕೆ ರೂಪಿಸುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಒಂದು ವೇಳೆ ಸಾ.ರಾ. ಮಹೇಶ್ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಶಿಫ್ಟ್ ಆದರೆ, ಮೈಸೂರು ಜಿಲ್ಲಾ ರಾಜಕಾರಣದ ಸಮೀಕರಣವೇ ಬದಲಾಗುವ ಸಾಧ್ಯತೆ ಇದೆ.


