Sunday, August 14, 2022

Latest Posts

ಜೆಡಿಎಸ್‌ನಲ್ಲಿ ಭುಗಿಲೆದ್ದ ಭಿನ್ನಮತ| ಶಾಸಕ ಜಿ.ಟಿ.ದೇವೇಗೌಡ, ಸಂದೇಶ್ ನಾಗರಾಜ್ ಅಮಾನತಿಗೆ ಜೆಡಿಎಸ್ ಮುಖಂಡರ ಆಗ್ರಹ

ಹೊಸದಿಗಂತ ವರದಿ, ಮೈಸೂರು:

ಮೈಸೂರು ಮಹಾನಗರಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿವಾದ ಕಾಂಗ್ರೆಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಧಗ, ಧಗಿಸುತ್ತಿರುವಾಗಲೇ, ಇತ್ತ ಜೆಡಿಎಸ್‌ನಲ್ಲೂ ಭಿನ್ನಮತ ಸ್ಪೋಟಗೊಂಡಿದೆ. ಪಕ್ಷದಿಂದ ದೂರ ಉಳಿದು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹಾಗೂ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಬೇಕೆಂದು ಜೆಡಿಎಸ್‌ನ ಮುಖಂಡರು ಆಗ್ರಹಿಸಿದ್ದಾರೆ.

ಈ ಇಬ್ಬರು ಶಾಸಕರ ವಿರುದ್ಧ ಕ್ರಮ ಜರುಗಿಸದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಈ ಇಬ್ಬರು ಶಾಸಕ ವಿರುದ್ಧ ಸ್ಥಳೀಯ ಜೆಡಿಎಸ್ ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಶಿಸ್ತು ಕ್ರಮಕ್ಕೆ ಆಗ್ರಹಿಸಿರುವುದು, ಜೆಡಿಎಸ್‌ನಲ್ಲೂ ಭಿನ್ನಮತದ ಕಿಡಿ ಜೋರಾಗಿಯೇ ಹೊತ್ತಿಕೊಳ್ಳಲು ಕಾರಣವಾಗಿದೆ.

ಶನಿವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ
ಮೈಸೂರು ನಗರ ಜೆಡಿಎಸ್ ಅಧ್ಯಕ್ಷ ಕೆ. ಟಿ. ಚೆಲುವೇಗೌಡ ಹಾಗೂ ಸ್ಥಳೀಯ ಮುಖಂಡರು ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪ ಮೇಯರ್ ಚುನಾವಣೆಯಲ್ಲಿ ಭಾಗಿಯಾಗದೇ ದೂರ ಉಳಿದ ಶಾಸಕ ಜಿ. ಟಿ. ದೇವೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂಬoಧ ಜೆಡಿಎಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಪಕ್ಷದ ವರಿಷ್ಠರನ್ನು ಈಗಾಗಲೇ ಒತ್ತಾಯ ಮಾಡಲಾಗಿದೆ. ಈ ಇಬ್ಬರೂ ಕೂಡಾ ಉದ್ದೇಶಪೂರ್ವಕವಾಗಿ ದೂರ ಉಳಿದಿದ್ದಾರೆ. ಮನೆಯಲ್ಲಿಯೇ ಇದ್ದುಕೊಂಡು, ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. ಶಾಸಕ ಜಿ.ಟಿ.ದೇವೇಗೌಡರು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಪಕ್ಷವೇ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಿರತರಾಗಿರುವ ಜಿ.ಟಿ.ದೇವೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರರಾಗಿ ಸ್ಪರ್ಧಿಸಿ ತಮ್ಮ ಶಕ್ತಿ ತೋರಿಸಲಿ ಮೈಸೂರು ನಗರ ಜೆಡಿಎಸ್ ಅಧ್ಯಕ್ಷ ಕೆ. ಟಿ. ಚೆಲುವೇಗೌಡ ಸವಾಲ್ ಹಾಕಿದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಜಿಟಿ ದೇವೇಗೌಡರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡರೆ ನಾವೆಲ್ಲರೂ ಜೆಡಿಎಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಪಕ್ಷದ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಪಾಲಿಕೆಯ ಮಾಜಿ ಮೇಯರ್ ರವಿಕುಮಾರ್, ಜಿ.ಪಂ.ಸದಸ್ಯ ಮಾದೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss